ಪಾಂಡವಪುರ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಸರ್ವೋಚ್ಚ ನ್ಯಾಯಾಲಯಗಳು ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡುವ ಮೂಲಕ ರಾಜ್ಯದ ರೈತರಿಗೆ ಅನ್ಯಾಯವೆಸಗುತ್ತಿದೆ ಎಂದು ಆರೋಪಿಸಿ ರೈತರು ಶ್ರೀರಂಗಪಟ್ಟಣ- ಜೇವರ್ಗಿ ಹೆದ್ದಾರಿ ಸಂಚಾರ ತಡೆದು ಬುಧವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ಡಾ.ರಾಜ್‌ಕುಮಾರ್ ವೃತ್ತದಲ್ಲಿ ಜಮಾವಣೆಗೊಂಡ ರೈತರು, ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸುಪ್ರೀಂಕೋರ್ಟಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರೈತಸಂಘದ ತಾಲೂಕು ಉಪಾಧ್ಯಕ್ಷ ಹಾರೋಹಳ್ಳಿ ಲಕ್ಷ್ಮೀಗೌಡ, ಬೇಬಿ ನಟರಾಜು, ತಾಲೂಕು ಹೌಸಿಂಗ್ ಬೋರ್ಡ್ ನಿರ್ದೇಶಕ ಎನ್.ಭಾಸ್ಕರ್, ಬಿಜೆಪಿ ಮುಖಂಡ ಎಚ್.ಎನ್.ಮಂಜುನಾಥ್, ಹಿರೇಮರಳಿ ಲೋಹಿತ್, ಆಟೋ ಯೋಗೇಶ್, ವೇಲು, ಎಣ್ಣೆಹೊಳೆಕೊಪ್ಪಲು ನಿರಂಜನ್ ಇತರರು ಇದ್ದರು.