More

    ಜನರ ಸಮಸ್ಯೆ ಪರಿಹರಿಸದ ಅಧಿಕಾರಿಗಳು

    ಬೆಳಗಾವಿ: ತಾಲೂಕು ಪಂಚಾಯಿತಿ ಅನುದಾನ ಹಂಚಿಕೆಯಲ್ಲಿ ತಾರತಮ್ಯ, ತರಕಾರಿ ಬೆಳೆಗಾರರಿಗೆ ಪರಿಹಾರ ವಿಳಂಬ, ಜನರ ಸಮಸ್ಯೆ ಪರಿಹರಿಸುವಲ್ಲಿ ಅಧಿಕಾರಿಗಳ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಬೆಳಗಾವಿ ತಾಲೂಕು ಪಂಚಾಯಿತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನಗರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ, ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಭವನ ದುರಸ್ತಿ ಸೇರಿ ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗಾಗಿ ತಾಲೂಕು ಪಂಚಾಯಿತಿಗೆ 2 ಕೋಟಿ ರೂ. ಅನುದಾನ ಬಂದಿದೆ.

    ಈ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಕೆಲ ಸದಸ್ಯರು ದೂರಿದರು. ಅನುದಾನ ಎಲ್ಲಿದೆ?: ಬೆಳಗಾವಿ ತಾಪಂಗೆ 2019-20ನೇ ಸಾಲಿನಲ್ಲಿ 2 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಪ್ರತಿ ಸದಸ್ಯರಿಗೆ ಆಯಾ ಕ್ಷೇತ್ರಗಳ ಅಭಿವೃದ್ಧಿಗೆ 4.5 ಲಕ್ಷ ರೂ. ಅನುದಾನ ಬರಬೇಕು. ಆದರೆ, ಕೇವಲ 3.5 ಲಕ್ಷ ರೂ. ಅನುದಾನ ಹಂಚಿಕೆ ಮಾಡಲಾಗುತ್ತಿದೆ. ಬಾಕಿ ಅನುದಾನ ಎಲ್ಲಿಗೆ ಹೋಗಿದೆ. ಕಳೆದ ಬಾರಿ ಅನುದಾನ ಹಂಚಿಕೆ ವೇಳೆ ತಾರತಮ್ಯ ಮಾಡಲಾಗಿದೆ. ಅಧಿಕಾರಿಗಳ ನಿರ್ಲಕ್ಷೃದಿಂದ 38 ಲಕ್ಷ ರೂ. ಅನುದಾನ ವಾಪಸ್ ಹೋಗಿದೆ ಎಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

    ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ತರಕಾರಿ ಬೆಳೆಗಾರರಿಗೆ ಪರಿಹಾರ ಸಿಕ್ಕಿಲ್ಲ. ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ಸಮೀಕ್ಷೆ ನಡೆಸಿಲ್ಲ. ಇದರಿಂದ ರೈತರಿಗೆ ಅನ್ಯಾಯವಾಗಿದೆ. ತಕ್ಷಣ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮರು ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ಕಲ್ಪಿಸಬೇಕು ಎಂದು ಸದಸ್ಯರು ಆಗ್ರಹಿಸಿದರು. ತಾಪಂ ಅಧ್ಯಕ್ಷ ಶಂಕರಗೌಡ ಪಾಟೀಲ, ಉಪಾಧ್ಯಕ್ಷ ಮಾರುತಿ ಸನದಿ, ತಹಸೀಲ್ದಾರ್ ಕುಲಕರ್ಣಿ, ತಾಲೂಕು ಪಂಚಾಯಿತಿ ಸದಸ್ಯರು, ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

    ಆನ್‌ಲೈನ್ ಶಿಕ್ಷಣ ಬೇಡ: ಆನ್‌ಲೈನ್ ಶಿಕ್ಷಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸದಸ್ಯರು, ಕರೊನಾ ವೈರಸ್ ಕಾರಣ ಆನ್‌ಲೈನ್ ಶಿಕ್ಷಣ ಅನಿವಾರ್ಯ ಎನ್ನುವುದು ಸರಿಯಲ್ಲ. ಆನ್‌ಲೈನ್ ಶಿಕ್ಷಣದಿಂದ ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬಿರುತ್ತದೆ. ಬಡ ವಿದ್ಯಾರ್ಥಿಗಳಿಗೆ ಮೊಬೈಲ್ ಖರೀದಿ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಸರ್ಕಾರ ಈ ನಿರ್ಧಾರ ಕೈ ಬಿಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ತಾಪಂ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಕುರಿತು ಸದಸ್ಯರಿಗೆ ಮನವರಿಕೆ ಮಾಡಿಕೊಡಲಾಗಿದೆ. ಸಂಕಷ್ಟದಲ್ಲಿರುವ ತರಕಾರಿ ಬೆಳೆಗಾರರಿಗೆ ಪರಿಹಾರ ನೀಡುವ ಸಂಬಂಧ ಸಮೀಕ್ಷೆ ನಡೆಸುವಂತೆ ಸೂಚಿಸಲಾಗಿದೆ.
    | ಎಂ.ಕೆ. ಕಲಾದಗಿ ತಾಲೂಕು ಪಂಚಾಯಿತಿ ಇಒ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts