More

    ಲ್ಯಾಪ್‌ಟಾಪ್‌ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ

    ಪಿರಿಯಾಪಟ್ಟಣ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎರಡು ಮತ್ತು ಮೂರನೇ ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು.

    ಪಟ್ಟಣದ ಬೆಟ್ಟದಪುರ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಹೊರಟ ವಿದ್ಯಾರ್ಥಿಗಳು, ಬಿ.ಎಂ.ರಸ್ತೆಯ ಮೂಲಕ ಮೆರವಣಿಗೆಯಲ್ಲಿ ಸಾಗಿ ತಾಲೂಕು ಕಚೇರಿ ತಲುಪಿದರು.

    ಸರ್ಕಾರದಿಂದ ನೀಡಲಾಗುವ ಉಚಿತ ಲ್ಯಾಪ್‌ಟಾಪ್ ವಿತರಿಸುವಂತೆ ಕಳೆದ 2 ವರ್ಷಗಳಿಂದ ಪಟ್ಟಿ ಸಲ್ಲಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಈಗಾಗಲೇ ದ್ವಿತೀಯ ಮತ್ತು ತೃತೀಯ ವರ್ಷದಲ್ಲಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡದೇ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ನೀಡಲು ಮುಂದಾಗಿರುವುದು ಸರಿಯಲ್ಲ ಎಂದು ಪ್ರತಿಭಟನಾನಿರತರು ಕಿಡಿಕಾರಿದರು.

    ಮನವಿ ಸ್ವೀಕರಿಸಲು ಸ್ಥಳಕ್ಕೆ ಬಂದ ಶಿರಸ್ತೇದಾರ್ ಶಕೀಲಾ ಬೇಗಂ ಅವರು, ನಿಮ್ಮ ಬೇಡಿಕೆ ಕುರಿತು ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದರು. ಇದಕ್ಕೆ ಒಪ್ಪದ ವಿದ್ಯಾರ್ಥಿಗಳು ಪ್ರಾಂಶುಪಾಲರನ್ನು ಸ್ಥಳಕ್ಕೆ ಕರೆಯಿಸಿ, ಲ್ಯಾಪ್‌ಟಾಪ್ ವಿತರಿಸುವ ಬಗ್ಗೆ ಕೂಡಲೇ ನಿರ್ಧಾರ ಕೈಗೊಳ್ಳಬೇಕು ಎಂದು ಪಟ್ಟು ಹಿಡಿದರು.

    ಕಾರ್ಯನಿಮಿತ್ತ ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿದ ಉಪವಿಭಾಗಾಧಿಕಾರಿ ಬಿ.ಎನ್.ವೀಣಾ ಅವರು ಪ್ರತಿಭಟನಾನಿರತ ವಿದ್ಯಾರ್ಥಿಗಳಿಂದ ಮನವಿ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಲ್ಯಾಪ್‌ಟಾಪ್‌ಗೆ ಒತ್ತಾಯಿಸಿ ಮನವಿ ಸಲ್ಲಿಸಿರುವುದನ್ನು ಸರ್ಕಾರದ ಗಮನಕ್ಕೆ ತರಲಾಗುವುದು. ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಕೈಬಿಟ್ಟು ಕಾಲೇಜಿಗೆ ತೆರಳುವಂತೆ ಸೂಚಿಸಿದರು. ಇದಕ್ಕೂ ಜಗ್ಗದ ವಿದ್ಯಾರ್ಥಿಗಳು ಲ್ಯಾಪ್‌ಟಾಪ್ ವಿತರಿಸುವ ಬಗ್ಗೆ ಭರವಸೆ ನೀಡುವಂತೆ ಒತ್ತಾಯಿಸಿದರು. ಅಲ್ಲದೆ ಸ್ಥಳದಲ್ಲೇ ಪ್ರತಿಭಟನೆ ಕುಳಿತರು.
    ಬಳಿಕ ಪ್ರಾಂಶುಪಾಲ ಡಾ.ದೇವರಾಜ್ ಅವರನ್ನು ಕಚೇರಿಗೆ ಕರೆಸಿಕೊಂಡ ಉಪವಿಭಾಗಾಧಿಕಾರಿ, ಶಿಕ್ಷಣ ಇಲಾಖೆ ಮಟ್ಟದಲ್ಲಿ ತೀರ್ಮಾನವಾಗಬೇಕಿದ್ದ ವಿಷಯವನ್ನು ವಿದ್ಯಾರ್ಥಿಗಳು ಪ್ರತಿಭಟನೆಯ ರೂಪಕ್ಕೆ ತಂದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಈಗಾಗಲೇ ಮೊದಲನೇ ವರ್ಷದ ವಿದ್ಯಾರ್ಥಿಗಳಿಗೆ ಬಂದಿರುವ 190 ಲ್ಯಾಪ್‌ಟಾಪ್‌ಗಳನ್ನು ವಿತರಿಸದೆ, ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳಿಗೂ ವಿತರಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಪತ್ರ ಬರೆಯುವಂತೆ ಪ್ರಾಂಶುಪಾಲರಿಗೆ ಸೂಚಿಸಿದರು.

    ಬಳಿಕ ಪ್ರತಿಭಟನಾನಿರತ ವಿದ್ಯಾರ್ಥಿಗಳ ಬಳಿಗೆ ಬಂದ ಪ್ರಾಂಶುಪಾಲ ಡಾ.ಡಿ.ದೇವರಾಜ್, ಮಾರ್ಚ್ ತಿಂಗಳ ಅಂತ್ಯದೊಳಗೆ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ವಿತರಿಸುವ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಅಂತ್ಯಗೊಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts