

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಸಹಯೋಗದೊಂದಿಗೆ ಪೋಷಣ್ ಅಭಿಯಾನ್ ಯೋಜನೆಯ ಪೋಷಣ್ ಮಾಸಾಚರಣೆ ಸಮಾರೋಪ ಸಮಾರಂಭ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಸೋಮವಾರ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ಮಾತನಾಡಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಿದರೆ ಮಾತ್ರ ಸಮಾಜದ ಅಭಿವೃದ್ಧಿ ಹೊಂದಲು ಸಾಧ್ಯ, ಕಿಶೋರಿಯರಲ್ಲಿ ಪೌಷ್ಠಿಕತೆ ಮತ್ತು ಸ್ವಚ್ಚತೆ ಅರಿವನ್ನು ಮೂಡಿಸುವುದು ಅಗತ್ಯವಾಗಿದೆ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ, ಗರ್ಭಿಣಿ ಬಾಣಂತಿಯರ ಆರೈಕೆ ಮತ್ತು ಮಕ್ಕಳ ಲಾಲನೆ ಪಾಲನೆ ಬಗ್ಗೆ ತಿಳಿಸಿದರು. ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ್ ನಾಯ್ಕ್ ವಿ. ಉಪಸ್ಥಿತರಿದ್ದರು. ಕೋಟ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಾಧವ್ ಪೈ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಬಿ. ಹಾದಿಮನಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ದೀಪಾ ನಿರೂಪಿಸಿ, ಪೋಷಣ್ ಅಭಿಯಾನ ಯೋಜನೆಯ ಜಿಲ್ಲಾ ಸಂಯೋಜಕಿ ಚೈತ್ರಾ ವಂದಿಸಿದರು. ಪೋಷಣ್ ಮಾಸಾಚರಣೆ ಅಂಗವಾಗಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.