More

    ಉಸ್ತುವಾರಿ ಸಚಿವರಿಗೆ ಪವರ್: ಸಚಿವ ಕೆ.ಜೆ.ಜಾರ್ಜ್

    ಶಿವಮೊಗ್ಗ: ವಿದ್ಯುತ್ ನಿರ್ವಹಣೆ, ಮೆಸ್ಕಾಂ, ಕೆಪಿಟಿಸಿಎಲ್ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಫುಲ್ ಪವರ್ ನೀಡಲಾಗಿದೆ. ಜಿಲ್ಲಾ ಮಟ್ಟದ ಇಂಧನ ಸಮಿತಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನೇ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

    ಜಿಲ್ಲಾ ಮಟ್ಟದಲ್ಲಿ ಉಸ್ತುವಾರಿ ಸಚಿವರೇ ಸಮಸ್ಯೆಗಳನ್ನು ಪರಿಹರಿಸಲಿದ್ದಾರೆ. ರಾಜ್ಯ ಮಟ್ಟದಲ್ಲಿ ನಮ್ಮ ಇಲಾಖೆಯಿಂದ ಏನಾದರೂ ನೆರವು ಬೇಕಿದ್ದರೆ ಕೂಡಲೆ ಸ್ಪಂದಿಸುತ್ತೇವೆ ಎಂದು ಶನಿವಾರ ಮೆಸ್ಕಾಂ ಹಾಗೂ ಕೆಪಿಟಿಸಿಎಲ್‌ಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೇಳಿದರು.
    ಸರ್ಕಾರಿ ಜಾಗ ಲಭ್ಯವಿರುವ ಕಡೆಗಳಲ್ಲಿ ಅವಶ್ಯಕತೆಗೆ ಪೂರಕವಾಗಿ ಸಬ್‌ಸ್ಟೇಷನ್ ಆರಂಭಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೆಸ್ಕಾಂ ಅಧೀಕ್ಷಕ ಅಭಿಯಂತರು ನಿರಂತರವಾಗಿ ಶಾಸಕರ ಸಂಪರ್ಕದಲ್ಲಿರಬೇಕು. ಟ್ರಾನ್ಸ್‌ಫಾರ್ಮರ್ ಬ್ಯಾಂಕ್ ಆರಂಭಿಸಿದ್ದು, ಟ್ರಾನ್ಸ್‌ಫಾರ್ಮರ್‌ಗಳು ಸುಟ್ಟುಹೋದರೆ ಕೂಡಲೆ ಬದಲಾಯಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
    ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿ, ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ನಡುವೆ ಸಮನ್ವಯ ಕೊರತೆಯಿದೆ. ಅದರಲ್ಲೂ ಮಲೆನಾಡಿನ ಜಿಲ್ಲೆಗಳಲ್ಲಿ ಈ ಸಮಸ್ಯೆ ಹೆಚ್ಚಿದೆ. ಹೀಗಾಗಿ ಈ ಭಾಗಕ್ಕೆ ಪ್ರತ್ಯೇಕವಾಗಿ ಓರ್ವ ನೋಡಲ್ ಅಧಿಕಾರಿ ನೇಮಕ ಮಾಡಬೇಕು ಎಂದು ಮನವಿ ಮಾಡಿದರು.
    ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಉಚಿತ ನೀರು ಪೂರೈಸಬೇಕೆಂದು ನ.1ರಂದು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಅದು ಎಷ್ಟರಮಟ್ಟಿಗೆ ಕಾರ್ಯಗತವಾಗಿದೆ ಎಂಬ ಬಗ್ಗೆ ನಾನೇ ಖುದ್ದು ಪರಿಶೀಲಿಸುತ್ತೇನೆ. ಸರ್ಕಾರಿ ಶಾಲೆಗಳಿಗೆ ವಿದ್ಯುತ್ ಪೂರೈಕೆ ಸಮಸ್ಯೆಯಾಗದಂತೆ ನಿಗಾವಹಿಸಲಾಗುವುದು ಎಂದರು.
    ಕರ್ನಾಟಕ ಅರಣ್ಯ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್‌ಕುಮಾರ್ ಪಾಂಡೆ, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಡಿ.ಪದ್ಮಾವತಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಪಂ ಸಿಇಒ ಸ್ನೇಹಲ್ ಲೋಖಂಡೆ, ಶಾಸಕರಾದ ಆರಗ ಜ್ಞಾನೇಂದ್ರ, ಶಾರದಾ ಪೂರ‌್ಯಾನಾಯ್ಕಾ, ಎಸ್.ಎನ್.ಚನ್ನಬಸಪ್ಪ ಸಭೆಯಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts