ಹಾಸನ ಲೋಕಸಭೆ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿಯಾಗಿ ಪ್ರಜ್ವಲ್​ ರೇವಣ್ಣ ನಾಮಪತ್ರ ಸಲ್ಲಿಕೆ

ಹಾಸನ: ಹಾಸನ ಲೋಕಸಭೆ ಕ್ಷೇತ್ರದಿಂದ ಜೆಡಿಎಸ್​ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಲೋಕೋಪಯೋಗಿ ಸಚಿವ ಎಚ್​.ಡಿ. ರೇವಣ್ಣ ಪುತ್ರ ಪ್ರಜ್ವಲ್​ ರೇವಣ್ಣ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಜ್ವಲ್​ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್​ ವರಿಷ್ಠ ಎಚ್​.ಡಿ. ದೇವೇಗೌಡ, ಸಿಎಂ ಎಚ್​.ಡಿ. ಕುಮಾರಸ್ವಾಮಿ, ಎಚ್​.ಡಿ. ರೇವಣ್ಣ, ಭವಾನಿ ರೇವಣ್ಣ ಉಪಸ್ಥಿತರಿದ್ದರು.

ಇಂದು ಬೆಳಗ್ಗೆ ಹಾಸನದ ಮಾವಿನಕೆರೆ ರಂಗನಾಥ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ ಪ್ರಜ್ವಲ್​ ರೇವಣ್ಣ ನಾಮಪತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಆ ನಂತರ ಅವರು ದೇವರ ಸಮ್ಮುಖದಲ್ಲಿ ನಾಮಪತ್ರಕ್ಕೆ ಸಹಿ ಹಾಕಿದ್ದರು.

ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ನಗರದ ಎನ್​.ಆರ್​. ವೃತ್ತದಿಂದ ಪ್ರಜ್ವಲ್​ ಮೆರವಣಿಗೆಯಲ್ಲಿ ಆಗಮಿಸಿದರು. ಜಿಲ್ಲಾ ಕಾಂಗ್ರೆಸ್​ ಕಚೇರಿಯಿಂದ ಮೆರವಣಿಗೆಯಲ್ಲಿ ಬಂದ ಕಾಂಗ್ರೆಸ್​ ಕಾರ್ಯಕರ್ತರು ಪ್ರಜ್ವಲ್​ಗೆ ಸಾಥ್​ ನೀಡಿದರು. ಪ್ರಜ್ವಲ್​ ಮೆರವಣಿಗೆಯಲ್ಲಿ ಸಾಗಿ ಬಂದ ದಾರಿಯುದ್ದಕ್ಕೂ ಅಭಿಮಾನಿಗಳು ಅವರ ಮೇಲೆ ಹೂವಿನ ಸುರಿಮಳೆ ಸುರಿಸಿ ಭವ್ಯ ಸ್ವಾಗತ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹಾಸನ ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಜಾವಗಲ್​ ಮಂಜುನಾಥ್​ ಅವರು ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ. ಹೈಕಮಾಂಡ್​ ತೀರ್ಮಾನದಂತೆ ಜೆಡಿಎಸ್​ ಅಭ್ಯರ್ಥಿಗೆ ಬೆಂಬಲ ನೀಡುತ್ತೇವೆ. ಪ್ರಜ್ವಲ್​ ನಾಮಪತ್ರ ಸಲ್ಲಿಕೆ ವೇಳೆ ಮತ್ತು ಜೆಡಿಎಸ್​ ಕಾರ್ಯಕರ್ತರ ಸಮಾವೇಶದಲ್ಲೂ ಭಾಗಿಯಾಗುತ್ತೇವೆ ಎಂದು ತಿಳಿಸಿದರು.