

Actress Ramya: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಅಭಿಮಾನಿಗಳ ಕೆಟ್ಟ, ಅಸಭ್ಯ ಕಮೆಂಟ್ಗಳ ವಿರುದ್ಧ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ತೀವ್ರ ಕಿಡಿಕಾರಿದ್ದಾರೆ. ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿರುವ ದರ್ಶನ್ ಹತ್ಯೆ ಕೇಸ್ ಕುರಿತಾದ ಬೆಳವಣಿಗೆ ಕುರಿತು ಹಾಕಿದ್ದ ಪೋಸ್ಟ್ ಬೆನ್ನಲ್ಲೇ ನಟಿಗೆ 'ಡಿಬಾಸ್' ಫ್ಯಾನ್ಸ್ಗಳಿಂದ ಅಶ್ಲೀಲ ಕಮೆಂಟ್ಗಳ ಸುರಿಮಳೆಯೇ ಹರಿದುಬಂದಿವೆ. ದರ್ಶನ್ ಅಭಿಮಾನಿಗಳ ಈ ನಡೆಯನ್ನು ಖಂಡಿಸಿ, ಧ್ವನಿ ಎತ್ತಿರುವ ರಮ್ಯಾಗೆ ನಟ ಪ್ರಥಮ್ ಕೂಡ ಸಾಥ್ ನೀಡಿದ್ದಾರೆ.
ಪ್ರಸ್ತುತ, ದರ್ಶನ್ ಅಭಿಮಾನಿಗಳ ನಡುವಿನ ವಾಗ್ವಾದ ಪೊಲೀಸ್ ಠಾಣೆ ಮೆಟ್ಟಿಲೇರುವ ಸಾಧ್ಯತೆ ಇದೆ. ಸಾಮಾಜಿಕ ಜಾಲತಾಣದಲ್ಲಿ ತೀರಾ ಕೆಟ್ಟದಾಗಿ ಕಮೆಂಟ್ ಮಾಡುತ್ತಿರುವ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ದಾಖಲಿಸಲು ರಮ್ಯಾ ಸಜ್ಜಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಮ್ಮ ವಕೀಲರೊಂದಿಗೆ ಚರ್ಚಿಸಿದ ಬಳಿಕವೇ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡುವುದಾಗಿ ನಟಿ ರಮ್ಯಾ ಅವರು ಸುದ್ದಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕೂಡ ಪ್ರತಿಕ್ರಿಯೆ ನೀಡಿದ್ದು, ರಮ್ಯಾ ದೂರು ನೀಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ. ಅಲ್ಲದೆ, ಸುಮೊಟೋ ಪ್ರಕರಣ ದಾಖಲಿಸಲು ಅವಕಾಶವಿದ್ದರೆ, ಪೊಲೀಸರು ಪರಿಶೀಲನೆ ನಡೆಸುತ್ತಾರೆ ಎಂದು ಹೇಳಿದ್ದಾರೆ.
ಇನ್ನು ಈ ವಿಷಯ ಸ್ಯಾಂಡಲ್ವುಡ್ ಅಂಗಳದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದೆಲ್ಲದರ ನಡುವೆಯೇ ಸುದ್ದಿಯಲ್ಲಿರುವ ನಟ ಪ್ರಥಮ್, ಇದೀಗ 'ಮೋಹಕತಾರೆ' ರಮ್ಯ ಪರ ಬ್ಯಾಟ್ ಬೀಸಿದ್ದಾರೆ. "ರಮ್ಯ ಅವರೊಟ್ಟಿಗೆ ನಾನು ನಿಲ್ಲುತ್ತೇನೆ. ನಾವೆಲ್ಲರೂ ಅವರ ಪರ ನಿಲ್ಲೋಣ. ಈಗಲೂ ನಾವು ರಮ್ಯಾರ ಆತ್ಮಗೌರವದ ಪರ ನಿಲ್ಲದೇ ಹೋದರೆ ನಾವು ಕಲಾವಿದರಾಗೋಕೆ ನಾಚಿಕೆಯಾಗಬೇಕು.ಕನ್ನಡ ಚಿತ್ರರಂಗವನ್ನು ಭಯದಿಂದ ಮುಕ್ತಗೊಳಿಸೋಣ. ಇಷ್ಟೆಲ್ಲಾ ಆದ್ರೂ ಜಾಣಕಿವುಡರಾಗಿರೋ ಪುಣ್ಯಾತ್ಮ ಕಲಾವಿದರಿಗೆ ದೇವರು ನೂರ್ಕಾಲ ಆಯಸ್ಸು ನೀಡಲೆಂದು ಪ್ರಾರ್ಥಿಸುವೆ" ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗೆಳತಿ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳಿಗೆ ನೀಡಿರುವ ಜಾಮೀನು ಪ್ರಶ್ನಿಸಿ (ಜಾಮೀನು ರದ್ದು ಕೋರಿ) ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಜುಲೈ 24ರಂದು ಎರಡೂ ಕಡೆಯ ವಾದನ್ನು ಆಲಿಸಿ, ತೀರ್ಪು ಕಾಯ್ದಿರಿಸಿದೆ. ಗಮನಾರ್ಹ ಸಂಗತಿ ಏನೆಂದರೆ, ದರ್ಶನ್ಗೆ ಜಾಮೀನು ನೀಡಿರುವ ಹೈಕೋರ್ಟ್ ಕ್ರಮವನ್ನು ಸುಪ್ರೀಂಕೋರ್ಟ್ ಟೀಕಿಸಿದೆ.
ಇದರ ಬೆನ್ನಲ್ಲೇ ಸುಪ್ರೀಂಕೋರ್ಟ್ ಹೇಳಿಕೆಗಳನ್ನು ಉಲ್ಲೇಖಿಸಿ 'ಲೈವ್ ಲಾ' ಸುದ್ದಿ ಮಾಧ್ಯಮ ಮಾಡಿರುವ ವರದಿಯ ಸ್ಕ್ರೀನ್ಶಾಟ್ ಅನ್ನು ತಮ್ಮ 'ಎಕ್ಸ್' ಖಾತೆಯಲ್ಲಿ ಶೇರ್ ಮಾಡಿಕೊಂಡ ರಮ್ಯಾ, ಭಾರತದ ಸಾಮಾನ್ಯ ಜನರಿಗೆ ಸುಪ್ರೀಂಕೋರ್ಟ್ ಒಂದು ಆಶಾಕಿರಣ. ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿದೆ ಎಂದು ಬರೆದುಕೊಂಡಿದ್ದರು. ಇದನ್ನು ನೋಡಿದ ದರ್ಶನ್ ಅಭಿಮಾನಿಗಳು ರಮ್ಯಾ ಅವರ ವಿರುದ್ಧ ಕಿಡಿಕಾರಿದ್ದು, ಅಶ್ಲೀಲ, ಅಸಭ್ಯ ಕಮೆಂಟ್ಗಳನ್ನು ಮಾಡಿದ್ದಾರೆ.