ಬಳ್ಳಾರಿ: ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಡಿಸಿ ಪ್ರಶಾಂತಕುಮಾರ ಮಿಶ್ರಾ ಹೇಳಿದರು.
ಇದನ್ನೂ ಓದಿ:ಅಂಬೇಡ್ಕರ್ ಜಯಂತಿ ಅದ್ದೂರಿ ಆಚರಣೆ
ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನ ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಏ.5 ಡಾ.ಬಾಬು ಜಗಜೀವನ ರಾಮ್ ಮತ್ತು ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಕಳೆದ ಎರಡು ವರ್ಷಗಳಲ್ಲಿ ಚುನಾವಣೆ ಹಿನ್ನಲೆಯಲ್ಲಿ ಮಹನೀಯರ ಜಯಂತಿಗಳನ್ನು ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ವಿಜೃಂಭಣೆಯಿಂದ ಆಚರಿಸಲು ವಿವಿಧ ಇಲಾಖೆಗಳ ಅಧಿಕಾರಿಗಳ ಸಮಿತಿ ರಚಿಸಲಾಗುವುದು. ಆಯಾ ಸಮಿತಿಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೇರ್ ಮಾತನಾಡಿ, ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಗ್ರಾಪಂ ಮಟ್ಟದಲ್ಲಿ ಅಚ್ಚುಕಟ್ಟಾಗಿ ಆಯೋಜಿಸುವಂತೆ ನಿರ್ದೇಶನ ನೀಡಲಾಗುವುದು. ಜಯಂತಿ ಅಂಗವಾಗಿ ನಗರದಲ್ಲಿ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಮತ್ತು ಕಲಾವಿದರ ತಂಡಗಳ ಅದ್ದೂರಿ ಮೆರವಣಿಗೆ ಆಯೋಜಿಸಲಾಗುವುದು ಎಂದರು.
ನಗರದ ನಲ್ಲಚೇರುವು ಪ್ರದೇಶದಲ್ಲಿರುವ ಡಾ.ಬಾಬು ಜಗನ್ ಜೀವನ್ ರಾಮ್ ಭವನದ ಮೇಲ್ಛಾವಣಿ ತಗಡಿನ ಶೀಟ್‌ನಿಂದ ಕೂಡಿದ್ದು, ಕೂಡಲೇ ಬದಲಾಯಿಸಿ ಮೇಲ್ಛಾವಣೆ ನಿರ್ಮಿಸಬೇಕು. ನಗರದ ಮೊದಲನೇ ಗೇಟ್ ಬಳಿ ಡಾ.ಬಿ.ಆರ್.ಅಂಬೇಡ್ಕರ್ ಭವನದ ದುರಸ್ತಿ ಕಾರ್ಯಕ್ಕೆ ವೇಗ ನೀಡಬೇಕು. ಮಹನೀಯರ ಜಯಂತಿ ಕಾರ್ಯಕ್ರಮ ಗ್ರಾಮಮಟ್ಟದಲ್ಲಿ ಸರಿಯಾಗಿ ಆಯೋಜಿಸುತ್ತಿಲ್ಲ. ಅಲ್ಲದೆ, ವಿಚಾರಧಾರೆಗಳನ್ನು ಯುವ ಸಮುದಾಯಕ್ಕೆ ತಲುಪಿಸುವ ವಿಚಾರ ಸಂಕಿರಣ ಇಂಥ ಕಾರ್ಯಕ್ರಮ ಆಯೋಜಿಸಿ ಮಾಹಿತಿ ತಲುಪಿಸುವ ಕೆಲಸವಾಗಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು.
