More

    ಪ್ರಾಕೃತಿಕ ವಿಕೋಪ ಎದುರಿಸಲು ಸನ್ನದ್ಧರಾಗಿ: ವೆಂಕಟರಾಜಾ ಸೂಚನೆ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪೂರ್ವ ಮುಂಗಾರು ಉತ್ತಮವಾಗಿದ್ದು, ಮುಂದಿನ ಮುಂಗಾರು ಸಂದರ್ಭದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಮುಂಗಾರು ಸಂದರ್ಭದಲ್ಲಿ ಉಂಟಾಗಬಹುದಾದ ಪ್ರಾಕೃತಿಕ ವಿಕೋಪವನ್ನು ಎದುರಿಸಲು ಈಗಿನಿಂದಲೇ ಎಚ್ಚರ ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.


    ಮುಂಗಾರು ಸಂದರ್ಭದಲ್ಲಿ ಅಗತ್ಯ ಕಾರ್ಯ ನಿರ್ವಹಣೆ, ಶುದ್ಧ ಕುಡಿಯುವ ನೀರು ಪೂರೈಕೆ ಮತ್ತಿತರ ಸಂಬಂಧ ಶುಕ್ರವಾರ ವಿಡಿಯೋ ಸಂವಾದ ಮೂಲಕ ಅಧಿಕಾರಿಗಳ ಜೊತೆ ಅವರು ಮಾತನಾಡಿದರು.


    ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ತಹಶೀಲ್ದಾರರು ಮತ್ತು ತಾಲ್ಲೂಕು ಪಂಚಾಯತ್ ಇಒಗಳು ಶುದ್ಧ ಕುಡಿಯುವ ನೀರು ಪೂರೈಕೆ ಮತ್ತು ಪ್ರಾಕೃತಿಕ ವಿಕೋಪ ಎದುರಿಸಲು ಸದಾ ಎಚ್ಚರವಹಿಸಬೇಕು ಎಂದರು.


    ಹೆಚ್ಚಿನ ಮಳೆಯಾಗಿ ಪ್ರವಾಹ ಉಂಟಾದಲ್ಲಿ, ಪ್ರವಾಹ ಪೀಡಿತ ಪ್ರದೇಶಗಳ ಜನರನ್ನು ಹತ್ತಿರದ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಮುಂದಾಗಬೇಕು. ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.


    ಕುಡಿಯುವ ನೀರು ಸಂಬಂಧಿಸಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು. ಪ್ರತೀ ನಿತ್ಯ ಕುಡಿಯುವ ನೀರನ್ನು ಪರೀಕ್ಷೆ ಮಾಡಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹೆಚ್ಚಿನ ಕಾಳಜಿವಹಿಸಬೇಕು. ಯಾವುದೇ ರೀತಿಯ ಲೋಪ ಉಂಟಾಗದಂತೆ ಗಮನಹರಿಸಬೇಕು ಎಂದು ಸೂಚಿಸಿದರು.


    ಪರಿಸರ ಮತ್ತು ಸ್ವಚ್ಛತೆ ಕಾಪಾಡುವತ್ತ ಹೆಚ್ಚಿನ ಮುತುವರ್ಜಿ ವಹಿಸಬೇಕು. ಶಾಲಾ-ಕಾಲೇಜುಗಳು, ವಿದ್ಯಾರ್ಥಿ ನಿಲಯಗಳು ಸೇರಿದಂತೆ ಎಲ್ಲೆಡೆ ನೀರಿನ ಟ್ಯಾಂಕ್‌ಗಳನ್ನು ಸ್ವಚ್ಚಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.


    ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು. ಹೊಟ್ಟೆನೋವು, ತಲೆನೋವು, ವಾಂತಿಬೇಧಿ ಇತರೆ ರೋಗಗಳು ಕಂಡುಬಂದರೆ ಕೂಡಲೇ ಚಿಕಿತ್ಸೆ ನೀಡಬೇಕು. ಎಲ್ಲಾ ಹಂತದ ಅಧಿಕಾರಿಗಳು ಕ್ರೀಯಾಶೀಲವಾಗಿ ಕಾರ್ಯನಿರ್ವಹಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳು ಪರಿಶೀಲಿಸಬೇಕು ಎಂದರು.


    ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ಕೆಲಸ ಮಾಡಿದ್ದಲ್ಲಿ ಎಲ್ಲರಿಗೂ ಒಳ್ಳೆಯದಾಗಲಿದೆ. ಅದು ಬಿಟ್ಟು ಇತರರಿಗೆ ಬೊಟ್ಟು ಮಾಡುವುದು ಬೇಡ ಎಂದು ತಾಕೀತು ಮಾಡಿದ ಅವರು, ಪೂರ್ವ ಮುಂಗಾರು ಸಂದರ್ಭದಲ್ಲಿ ಮನೆ ಹಾನಿಯಾಗಿದ್ದಲ್ಲಿ ಕೂಡಲೇ ಪರಿಶೀಲಿಸಿ ನಿಯಮಾನುಸಾರ ಪರಿಹಾರ ನೀಡಬೇಕು. ಮಳೆ ಹಾನಿ ಸಂಬಂಧಿಸಿದಂತೆ ಛಾಯಾಚಿತ್ರ ಸಹಿತ ಮಾಹಿತಿಯನ್ನು ಕಳುಹಿಸಬೇಕು ಎಂದು ಸೂಚಿಸಿದರು.


    ಸೆಸ್ಕ್ ಇಲಾಖೆ ವ್ಯಾಪ್ತಿಯಲ್ಲಿ ಹೊರಗುತ್ತಿಗೆಯಡಿ ಗ್ಯಾಂಗ್‌ಮೆನ್‌ಗಳನ್ನು ನಿಯೋಜಿಸಿಕೊಂಡು ಮುಂಗಾರು ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.


    ಕೇರಳ ಗಡಿ ಪ್ರದೇಶ ಸೇರಿದಂತೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಶೇ.೬೦ ರಷ್ಟು ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಬರೆಸಬೇಕು. ಆ ನಿಟ್ಟಿನಲ್ಲಿ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಇದೇ ಸಂದರ್ಭದಲ್ಲಿ ಸೂಚಿಸಿದರು.


    ವಿಡಿಯೋ ಸಂವಾದಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಪಾಲ್ಗೊಂಡು ಹಲವು ಮಾಹಿತಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts