ಗ್ರಾಮಾಂತರ ಪ್ರದೇಶದ ಮಾನಸಿಕ ರೋಗಿಗಳ ಗುರುತಿಸಿ

ಚಿಕ್ಕಮಗಳೂರು: ಗ್ರಾಮಾಂತರ ಪ್ರದೇಶದ ಜನರಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು ಈ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ತಾಪಂ ಅಧ್ಯಕ್ಷ ನೆಟ್ಟೇಕೆರೆಹಳ್ಳಿ ಜಯಣ್ಣ ಹೇಳಿದರು.

ನಗರದ ತಾಪಂ ಸಾಮರ್ಥ್ಯಸೌಧದ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕದಿಂದ ಸೋಮವಾರ ಏರ್ಪಡಿಸಿದ್ದ ಮಾನಸಿಕ ಆರೋಗ್ಯ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಾನಸಿಕ ರೋಗಿಗಳಿದ್ದಲ್ಲಿ ಜನರೇ ಆರೋಗ್ಯ ಇಲಾಖೆ ಗಮನಕ್ಕೆ ತರಬೇಕು. ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನಡುವೆಯೂ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿ ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಯುವಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ರಾಮಾಂತರ ಪ್ರದೇಶದಲ್ಲಿ ಮಾನಸಿಕ ಆರೋಗ್ಯ ಸಮಸ್ಯೆ, ಇತರೆ ಸಾಂಕ್ರಾಮಿಕ ರೋಗಗಳಿಂದ ಬಳಲುವವರು ಕಂಡುಬಂದರೂ ಆಶಾ ಕಾರ್ಯಕರ್ತೆಯರು ತಕ್ಷಣ ಸಮೀಪದ ಉಪ ಆರೋಗ್ಯ ಕೇಂದ್ರಗಳಿಗೆ ತಿಳಿಸಬೇಕು ಎಂದು ತಿಳಿಸಿದರು.

ನೀರಿನ ಕೊರತೆ ತಲೆದೋರಿರುವ ತಾಲೂಕಿನ 35 ಹಳ್ಳಿಗಳಿಗೆ ಟ್ಯಾಂಕರ್ ನೀರು ಒದಗಿಸಲಾಗುತ್ತಿದೆ. ಗ್ರಾಮಸ್ಥರು ದೊಡ್ಡ ಡ್ರಮ್ಳಲ್ಲಿ ಸಂಗ್ರಹಿಸಿರುವ ನೀರನ್ನು ಮುಚ್ಚಿಡುವ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದಲ್ಲಿ ಸಂಗ್ರಹಿಸಿಟ್ಟುಕೊಂಡ ನೀರಿನಲ್ಲಿ ಕಾಯಿಲೆ ಹರಡುವ ಸೊಳ್ಳೆಗಳ ಉತ್ಪಾದನೆಗೆ ಕಾರಣವಾಗಬಹುದು. ಹೀಗಾಗಿ ಆಶಾ ಕಾರ್ಯಕರ್ತೆಯರು ಹೆಚ್ಚು ಕಾಳಜಿ ವಹಿಸಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಮಾನಸಿಕ ಆರೋಗ್ಯದಲ್ಲಿ ಏರುಪೇರಾಗಿರುವವರನ್ನು ಗುರುತಿಸಿ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ಸಮೀಪವರ್ತಿಗಳು ಪ್ರಯತ್ನ ನಡೆಸಬೇಕು. ಈಗಾಗಲೆ ನಗರದ ಡಿಎಆರ್​ನಲ್ಲಿ ಪೊಲೀಸ್ ತರಬೇತಿಯಲ್ಲಿದ್ದ ಮಹಿಳಾ ಪೇದೆಯೊಬ್ಬರು ಮಾನಸಿಕ ಅಸ್ವಸ್ಥೆಯಾಗಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಪ್ರಸ್ತಾಪಿಸಿದ ಅವರು, ಈ ರೀತಿ ಖಿನ್ನತೆಗೆ ಒಳಗಾಗುವವರನ್ನು ಗುರುತಿಸಿ ಅವರಿಗೆ ಚಿಕಿತ್ಸೆ ಕೊಡಿಸುವ ಕಾರ್ಯ ಕೈಗೊಳ್ಳಬೇಕು ಎಂದರು.

Leave a Reply

Your email address will not be published. Required fields are marked *