More

    ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಮುಂದುವರಿಸಿ

    ಧಾರವಾಡ: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಮುಂದುವರಿಸಬೇಕು. ಮಾಸ್ಕ್ ಧರಿಸದವರು, ಪರಸ್ಪರ ಅಂತರ ಕಾಪಾಡದವರಿಗೆ ದಂಡ ವಿಧಿಸಬೇಕು. ಕೋವಿಡ್ ಟೆಸ್ಟಿಂಗ್ ಹೆಚ್ಚಳಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರವಿಕುಮಾರ ಸುರಪುರ ಹೇಳಿದರು.
    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕೋವಿಡ್ ತಡೆ ಹಾಗೂ ಅತಿವೃಷ್ಟಿ ಹಾನಿ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ನಗರ ಪ್ರದೇಶದಲ್ಲಿ ಪೊಲೀಸ್ ಮತ್ತು ಪಾಲಿಕೆಯ ಆರೋಗ್ಯ ನಿರೀಕ್ಷಕರು ಕೋವಿಡ್ ನಿಯಂತ್ರಣಕ್ಕಾಗಿ ಶ್ರಮಿಸಬೇಕು. ಗ್ರಾಮೀಣ ಭಾಗದಲ್ಲಿ ಪಂಚಾಯತ್ ರಾಜ್ ಹಾಗೂ ಗ್ರಾಮೀಣ ಪೊಲೀಸರು ಜಾಗೃತಿ ಮೂಡಿಸಬೇಕು ಎಂದರು.
    ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಹಾನಿಯಾಗಿರುವ ಮನೆ, ಬೆಳೆಗಳಿಗೆ ತ್ವರಿತವಾಗಿ ಪರಿಹಾರ ಸಿಗುವಂತೆ ಕ್ರಮ ವಹಿಸಬೇಕು. ಸಾರ್ವಜನಿಕ ಸ್ವತ್ತು, ರಸ್ತೆ, ಸೇತುವೆ ಹಾನಿಗಳ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಿ ಅನುದಾನ ಬಿಡುಗಡೆಗೆ ಕ್ರಮ ವಹಿಸಬೇಕು ಎಂದರು.
    ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಜೂ. 1ರಿಂದ ಆ. 16ರವರೆಗೆ ಜಿಲ್ಲೆಯಲ್ಲಿ ಆದ ಹಾನಿ ಮಾಹಿತಿ ನೀಡಿದರು. ಅಲ್ಲದೆ, ಜಿಲ್ಲೆಯಲ್ಲಿ ಸಂಭಾವ್ಯ ಕೋವಿಡ್ 3ನೇ ಅಲೆಯ ಹಾನಿ ತಪ್ಪಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈವರೆಗೆ 7,09,170 ಜನರು ಮೊದಲ ಹಾಗೂ 2,01,148 ಜನರು 2ನೇ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ತಿಳಿಸಿದರು.
    ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಅಪರ ಜಿಲ್ಲಾಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿ ಡಾ. ಗೋಪಾಲಕೃಷ್ಣ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ, ಕಿಮ್್ಸ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ, ಡಾ. ಲಕ್ಷ್ಮೀಕಾಂತ ಲೋಕರೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಯಶವಂತ ಮದೀನಕರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಕುಮಾರ ಮಾನಕರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ರಾಜಶೇಖರ ಬಿಜಾಪುರ, ತಹಸೀಲ್ದಾರರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
    ಮಕ್ಕಳ ವೈದ್ಯಕೀಯ ತಪಾಸಣೆ ಅವಶ್ಯಕ: ಸಂಭಾವ್ಯ ಕೋವಿಡ್ 3ನೇ ಅಲೆಯನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ಮಕ್ಕಳನ್ನು ವೈದ್ಯಕೀಯ ತಪಾಸಣೆ ಮಾಡಿಸಲು ಪೋಷಕರಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಪಂ ಆಡಳಿತಾಧಿಕಾರಿ ಡಾ. ರವಿಕುಮಾರ ಸುರಪುರ ಹೇಳಿದರು. ಧಾರವಾಡದ ಜಿಪಂ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕೆಡಿಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 3ನೇ ಅಲೆಯ ಮಂಜಾಗ್ರತಾ ಕ್ರಮವಾಗಿ ಮಕ್ಕಳಿಗೆ ವೈದ್ಯಕೀಯ ಚಿಕಿತ್ಸೆ ಮತ್ತು ಗರ್ಭಿಣಿಯರಿಗೆ ಪೌಷ್ಟಿಕ ಆಹಾರದ ಮಾಹಿತಿ ನೀಡಬೇಕು. ಪೋಷಣ ಅಭಿಯಾನ ಯೋಜನೆ ಅಡಿ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಸೇವನೆ ಕುರಿತು ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ತಿಂಗಳು ಕನಿಷ್ಠ 2 ಬಾರಿ ಮನೆಗೆ ಭೇಟಿ ನೀಡಿ ಮಾಹಿತಿ ನೀಡಬೇಕು ಎಂದು ಸೂಚಿಸಿದರು. ಜಿಪಂ ಸಿಇಒ ಡಾ. ಸುಶೀಲಾ ಬಿ., ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts