ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ಹೊಸದಾಗಿ ರಚಿಸಲಾದ ರಾಜ್ಯದ 38 ತಾಲೂಕುಗಳಲ್ಲಿ ಸಿವಿಲ್ ನ್ಯಾಯಾಧೀಶರು ಜೆ.ಎಂ.ಎಫ್.ಸಿ ನ್ಯಾಯಾಲಯ ಸ್ಥಾಪಿಸಲು ಕರ್ನಾಟಕ ಉಚ್ಚ ನ್ಯಾಯಾಲಯದಿಂದ ಪ್ರಸ್ತಾವನೆ ಸ್ವೀಕೃತವಾಗಿದ್ದು, ಇದರಲ್ಲಿ ಉಡುಪಿ ಜಿಲ್ಲೆ ಕಾಪು ತಾಲೂಕು ಒಳಗೊಂಡಿದ್ದು, ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ. ಆರ್ಥಿಕ ಇಲಾಖೆ ಸಹಮತ ದೊರೆತ ಕೂಡಲೇ ಜೆಎಂಎಫ್‌ಸಿ ನ್ಯಾಯಾಲಯ ರಚನೆ ಮಾಡಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಸಚಿವ ಎಚ್.ಕೆ ಪಾಟೀಲ್ ಅವರು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿಧಾನಮಂಡಲ ಅಧಿವೇಶನ ಸಂದರ್ಭ ಕೇಳಿದ ಲಿಖಿತ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದಾರೆ.
ಕುಡಿಯುವ ನೀರು ಕಾಮಗಾರಿಗೆ ಕ್ರಿಯಾ ಯೋಜನೆ
ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 561 ಜನವಸತಿ ಪ್ರದೇಶಗಳಲ್ಲಿನ ಪ್ರತಿ ಮನೆಗಳಿಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಜಲಜೀವನ್ ಮಿಷನ್ ಯೋಜನೆಯಡಿ ವಿವಿಧ ಹಂತದಲ್ಲಿ ಒಟ್ಟು 72 ಏಕ ಗ್ರಾಮ ಕುಡಿಯುವ ನೀರಿನ ಕಾಮಗಾರಿ ಕೈಗೆತ್ತಿಕೊಂಡಿದ್ದು, ಈ ಪೈಕಿ 62 ಕಾಮಗಾರಿ ಪೂರ್ಣಗೊಂಡಿದ್ದು, 10 ಕಾಮಗಾರಿ ಪ್ರಗತಿಯಲ್ಲಿದೆ. ಪ್ರಸ್ತುತ ಬೇಸಿಗೆಯಲ್ಲಿ ನೀರಿನ ಕೊರತೆ ಉಂಟಾಗಬಹುದಾದ ಜನವಸತಿ ಪ್ರದೇಶ ಗುರುತಿಸಲಾಗಿದ್ದು, ತುರ್ತಾಗಿ ಕುಡಿಯುವ ನೀರಿನ ಕಾಮಗಾರಿ ಕೈಗೆತ್ತಿಕೊಳ್ಳಲು ಕ್ರಿಯಾ ಯೋಜನೆ ಸಿದ್ದಪಡಿಸಿದ್ದು, ಅದರಂತೆ ಕೊಳವೆ ಬಾವಿ ಹಾಗೂ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿ ನೀರಿನ ಸಮಸ್ಯೆ ಬಗೆಹರಿಸಿಕೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಈ ಕುರಿತ ಶಾಸಕರ ಪ್ರಶ್ನೆಗೆ ಲಿಖಿತವಾಗಿ ಭರವಸೆ ನೀಡಿದ್ದಾರೆ.
ಕೃಷಿ ಅಧಿಕಾರಿ ಹುದ್ದೆ ಭರ್ತಿಗೆ ಕ್ರಮ
ಕಾಪು ತಾಲೂಕಿನಲ್ಲಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಹುದ್ದೆ ಮಾಡದೇ ಇದ್ದರೂ ಕಾಪು ಹೋಬಳಿ ಉಡುಪಿ ತಾಲೂಕಿನ ಅಧೀನದಲ್ಲಿ ಇರುವುದರಿಂದ ಸಹಾಯಕ ಕೃಷಿ ನಿರ್ದೇಶಕರು, ಉಡುಪಿ ಪ್ರಭಾರದಲ್ಲಿದ್ದು, ಸರ್ಕಾರದ ಯೋಜನೆ ಅನುಷ್ಠಾನಗೊಳಿಸಲು ಕ್ರಮವಹಿಸಿದ್ದಾರೆ ಎಂದು ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಶಾಸಕರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದಾರೆ. ಉಡುಪಿ ಸಹಾಯಕ ನಿರ್ದೇಶಕರ ಕಚೇರಿಗೆ 37 ಹುದ್ದೆಗಳು ಮಂಜೂರಾಗಿದ್ದು, 8 ಹುದ್ದೆ ಭರ್ತಿ ಆಗಿದ್ದು, 29 ಹುದ್ದೆ ಖಾಲಿ ಇದೆ. ಪ್ರಸ್ತುತ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಯನ್ನು ನೇರ ನೇಮಕಾತಿ ಕೋಟಾದಡಿ ರಾಜ್ಯದಲ್ಲಿ 672 ಹುದ್ದೆ ಭರ್ತಿ ಮಾಡಲು ಕ್ರಮವಹಿಸಲಾಗುವುದು ಎಂದವರು ತಿಳಿಸಿದ್ದಾರೆ.