

ತಾಳಿಕೋಟೆ: ಗುಣಾತ್ಮಕ ಮತ್ತು ಸ್ಪರ್ಧಾತ್ಮಕ ಶಿಕ್ಷಣಕ್ಕೆ ದೇಶದಲ್ಲಿಯೇ ಪದವಿ ಪೂರ್ವ ಶಿಕ್ಷಣ ಇಲಾಖೆ ಮಾದರಿಯಾಗಿದೆ. ಇದರ ಅಸ್ಮಿತೆಯನ್ನು ಕಾಪಾಡಬೇಕು ಎಂದು ಒತ್ತಾಯಿಸಿ ಪದವಿ ಪೂರ್ವ ಶಿಕ್ಷಣ ಇಲಾಖಾ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಬೋಧಕೇತರ ಸಂಘಗಳ ಒಕ್ಕೂಟದ ಪದಾಧಿಕಾರಿಗಳು ಗುರುವಾರ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
1971ರ ಜನವರಿಯಲ್ಲಿ ಪದವಿ ಪೂರ್ವ ಶಿಕ್ಷಣ ಮಂಡಳಿಯು ಅಸ್ತಿತ್ವಕ್ಕೆ ಬಂದಿತು. ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಹಾಗೂ ಶಿಕ್ಷಣ ಸಚಿವರಾಗಿದ್ದ ವೀರಪ್ಪ ಮೊಯ್ಲಿ ಅವರ ದೂರದೃಷ್ಟಿ ಹಾಗೂ ಬದ್ಧತೆಯ ಫಲವಾಗಿ 1992ರಂದು ಸ್ವತಂತ್ರ ಪದವಿ ಪೂರ್ವ ಶಿಕ್ಷಣ ಇಲಾಖೆ ರೂಪುಗೊಂಡಿತು. ಪಪೂಶಿ ಇಲಾಖೆಯು ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಹಂತಗಳ ನಡುವೆ ಒಂದು ಸೇತುವೆಯಾಗಿ ಗುಣಾತ್ಮಕ ಹಾಗೂ ಸ್ಪರ್ಧಾತ್ಮಕ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದೆ. ಇದನ್ನು ಹಂತಹಂತವಾಗಿ ಕೊಲ್ಲುವ ಪ್ರಯತ್ನಗಳು ಆರಂಭಗೊಂಡಿರುವುದು ಸರಿಯಲ್ಲ ಎಂದು ಮನವಿಯಲ್ಲಿ ವಿನಂತಿಸಿದ್ದಾರೆ.
ಇದಕ್ಕೂ ಮುನ್ನ ಎಸ್.ಕೆ. ಪದವಿ ಪೂರ್ವ ಕಾಲೇಜ್‌ದಿಂದ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು. ಪದವಿ ಪೂರ್ವ ಶಿಕ್ಷಣ ಇಲಾಖಾ ಪ್ರಾಂಶುಪಾಲರು, ಉಪನ್ಯಾಸಕರು, ಮತ್ತು ಬೋಧಕೇತರ ಸಂಘಗಳ ಒಕ್ಕೂಟದ ಪದಾಧಿಕಾರಿಗಳು ಇದ್ದರು.