ಬಿಸಿಯೂಟ ನೌಕರರ ವೇತನ ಹೆಚ್ಚಳ : ರಾಮಣ್ಣ ವಿಟ್ಲ ಒತ್ತಾಯ : ಬಿ.ಸಿ.ರೋಡ್ ಮಿನಿ ವಿಧಾನಸೌಧ ಬಳಿ ಪ್ರತಿಭಟನೆ

7
Published on

ಬಂಟ್ವಾಳ: ಅಕ್ಷರ ದಾಸೋಹ ನೌಕರರಿಗೆ ರಾಜ್ಯ ಸರ್ಕಾರ ವಿಧಾನಸಭಾ ಚುನಾವಣೆಯಲ್ಲಿ ಘೋಷಣೆ ಮಾಡಿದಂತೆ 6 ಸಾವಿರ ರೂ. ವೇತನ ಹೆಚ್ಚಳ ಮಾಡಬೇಕೆಂದು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಗತಿಪರ ಅಕ್ಷರ ದಾಸೋಹ ನೌಕರರ ಸಂಘ(ಎ.ಐ.ಸಿ.ಸಿ.ಟಿ.ಯು) ವತಿಯಿಂದ ಬಿ.ಸಿ.ರೋಡ್ ಮಿನಿ ವಿಧಾನಸೌಧದ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಎ.ಐ.ಸಿ.ಸಿ.ಟಿ.ಯು ದ.ಕ. ಜಿಲ್ಲಾ ಅಧ್ಯಕ್ಷ ರಾಮಣ್ಣ ವಿಟ್ಲ ಮಾತನಾಡಿ, ದೇಶದ ಅಭಿವೃದ್ಧಿಗೆ ಶಿಕ್ಷಣ ಆರೋಗ್ಯ, ಉದ್ಯೋಗ ಹಾಗೂ ಆಹಾರ ಪೂರೈಸಲು ಬೇಕಾದ ಸಂಪನ್ಮೂಲವನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿದೆ. ಬಿಸಿಯೂಟ ಯೋಜನೆಯನ್ನು ಕೇಂದ್ರ ಸರ್ಕಾರ 2010ರಿಂದ ಕಡೆಗಣಿಸುತ್ತಲೇ ಬಂದಿದೆ. ರಾಜ್ಯದಲ್ಲಿ ಕೆಲಸದ ಒತ್ತಡ ಹೆಚ್ಚಳವಾಗಿದೆ. ಆದರೆ ಕೆಲಸಕ್ಕೆ ತಕ್ಕ ವೇತನ ಮಾತ್ರ ಸಿಗದೆ ನೌಕರರು ಸಂಕಷ್ಟದ ಪರಿಸ್ಥಿತಿಯಲ್ಲಿ ನರಳುವಂತೆ ಮಾಡಿದೆ. ಬಿಸಿಯೂಟ ನೌಕರರಿಗೆ ರಾಜ್ಯ ಸರ್ಕಾರ ವಿಧಾನಸಭಾ ಚುನಾವಣೆಯಲ್ಲಿ ಘೋಷಣೆ ಮಾಡಿದಂತೆ 6 ಸಾವಿರ ರೂ. ವೇತನ ನೀಡಬೇಕೆಂದು ಒತ್ತಾಯಿಸಿದರು.

ಎ.ಐ.ಸಿ.ಸಿ.ಟಿ.ಯು ರಾಜ್ಯ ಸಮಿತಿ ಗೌರವಾಧ್ಯಕ್ಷ ಮೋಹನ್ ಕೆ.ಇ, ಎ.ಐ.ಸಿ.ಸಿ.ಟಿ.ಯು ತಾಲೂಕು ಮುಖಂಡ ರಾಜಾ ಚೆಂಡ್ತಿಮಾರ್ ಮಾತನಾಡಿದರು. ಮುಖಂಡರಾದ ಸಜೇಶ್ ವಿಟ್ಲ, ಸುಲೈಮಾನ್ ಕೆಲಿಂಜ, ಅಕ್ಷರ ದಾಸೋಹ ಸಂಘಟನೆಯ ತಾಲೂಕು ಅಧ್ಯಕ್ಷೆ ಜಯಶ್ರೀ ಆರ್.ಕೆ, ಕಾರ್ಯದರ್ಶಿ ವಾಣಿಶ್ರೀ ಕನ್ಯಾನ, ಉಪಾಧ್ಯಕ್ಷರಾದ ವಿನಯ ನಡುಮೊಗರು, ಸೇವಂತಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net