ಶಿಕ್ಷಕರ ವರ್ಗಾವಣೆಗೆ ವಿರೋಧ : ಮಕ್ಕಳ ಶಾಲೆಗೆ ಕಳುಹಿಸದೆ ಪಾಲಕರ ಪ್ರತಿಭಟನೆ

Published on

ಪುತ್ತೂರು ಗ್ರಾಮಾಂತರ: ಶಿಕ್ಷಕರ ವರ್ಗಾವಣೆ ವಿರೋಧಿಸಿ ಮತ್ತು ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಇರ್ದೆ ಗ್ರಾಮದ ಪೇರಲ್ತಡ್ಕ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಪಾಲಕರು ಬುಧವಾರ ಮಕ್ಕಳನ್ನು ಶಾಲೆಗೆ ಕಳುಹಿಸದೆ ಪ್ರತಿಭಟನೆ ನಡೆಸಿದ್ದಾರೆ.

ಪೇರಲ್ತಡ್ಕ ಸರ್ಕಾರಿ ಶಾಲೆಯಲ್ಲಿ 93 ವಿದ್ಯಾರ್ಥಿಗಳು ಕಲಿಯುತ್ತಿದ್ದು, ದಾಖಲೆಯಲ್ಲಿರುವ 7 ಶಿಕ್ಷಕರ ಪೈಕಿ ಇಬ್ಬರು ಬೇರೆ ಶಾಲೆಗಳಲ್ಲಿ ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ನಡೆದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಪ್ರಸ್ತುತ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 5 ಶಿಕ್ಷಕರ ಪೈಕಿ ಶಿಕ್ಷಕಿ ಹಿಲ್ಡಾ ಜೆನೆಟ್ ಗೀತಾ ಲೋಬೋ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಸೀತಾರಾಮ ಗೌಡ ಅವರನ್ನು ಹೆಚ್ಚುವರಿ ಎಂದು ಪರಿಗಣಿಸಿ ಶಿಕ್ಷಣ ಇಲಾಖೆಯು ವರ್ಗಾವಣೆ ಪಟ್ಟಿಗೆ ಸೇರಿಸಿರುವುದು ಎಸ್‌ಡಿಎಂಸಿ ಮತ್ತು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಆದೇಶ ಹಿಂಪಡೆಯುವ ತನಕ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪಾಲಕರು ಪಟ್ಟು ಹಿಡಿದಿದ್ದಾರೆ. ಶಾಲೆಯ 93 ವಿದ್ಯಾರ್ಥಿಗಳ ಪೈಕಿ ಬುಧವಾರ 7 ವಿದ್ಯಾರ್ಥಿಗಳು ಮಾತ್ರ ತರಗತಿಗೆ ಹಾಜರಾಗಿದ್ದಾರೆ.

ನಾವು ಸರ್ಕಾರಿ ಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದೇವೆ. ಸರ್ಕಾರಿ ಶಾಲೆ ಉಳಿಸಿಕೊಳ್ಳಬೇಕಾದರೆ ಅಗತ್ಯಕ್ಕೆ ತಕ್ಕಂತೆ ಶಿಕ್ಷಕರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇರಬೇಕು. ಆದರೆ ಶಿಕ್ಷಕರನ್ನು ಬೇಕಾಬಿಟ್ಟಿಯಾಗಿ ವರ್ಗಾವಣೆಗೊಳಿಸುವುದು ಸರಿಯಲ್ಲ. ಈ ವಿಚಾರದಲ್ಲಿ ಈ ಹಿಂದೆಯೇ ಶಾಸಕರ ಜತೆ ಮಾತನಾಡಿದ್ದೆವು. ಮತ್ತೊಮ್ಮೆ ಈ ವಿಚಾರವನ್ನು ಶಾಸಕರ ಗಮನಕ್ಕೆ ತರುತ್ತೇವೆ. ಇಬ್ರಾಹಿಂ ಎಸ್‌ಡಿಎಂಸಿ ಅಧ್ಯಕ್ಷ ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸದೆ ಪ್ರತಿಭಟನೆ ನಡೆಸಿದ ವಿಚಾರವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಗಮನಕ್ಕೆ ತಂದಿದ್ದೇವೆ. ಆದರೆ ವರ್ಗಾವಣೆ ಆದೇಶದ ಹಿನ್ನೆಲೆಯಲ್ಲಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕೂಡ ಬುಧವಾರ ಅಧಿಕಾರ ಹಸ್ತಾಂತರಿಸಿರುವುದರಿಂದ ಅವರಿಗೂ ಶಾಲೆಗೆ ಭೇಟಿ ನೀಡಲು ಸಾಧ್ಯವಾಗಿಲ್ಲ. ನಾಳೆ ಶಾಲೆಗೆ ಭೇಟಿ ನೀಡಿ, ಸಮಸ್ಯೆ ಕುರಿತು ಸಂಬಂಧಪಟ್ಟವರ ಗಮನ ಸೆಳೆಯುವ ಪ್ರಯತ್ನ ಮಾಡಲಾಗುವುದು. ವಿದ್ಯಾಶ್ರೀ ಸರೋಳಿಕಾನ ಬೆಟ್ಟಂಪಾಡಿ ಗ್ರಾಪಂ ಅಧ್ಯಕ್ಷೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net