ಹೊನ್ನಾಳಿ: ಬಸ್ ದರವನ್ನು ಶೇ. 15 ರಷ್ಟು ಏರಿಕೆ ಮಾಡಿರುವುದನ್ನು ಖಂಡಿಸಿ ತಾಲೂಕು ಬಿಜೆಪಿಯಿಂದ ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ತಾಲೂಕು ಕಚೇರಿ ಎದುರು ಸೇರಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೊಷಣೆಗಳನ್ನು ಕೂಗಿ, ನಂತರ ಮನವಿ ಸಲ್ಲಿಸಿದರು.
ಪ್ರತಿಭಟನೆ ವೇಳೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ ಯಾವುದೇ ಅಭಿವೃದ್ಧಿ ಕೈಗೊಂಡಿಲ್ಲ. ಭ್ರಷ್ಟಾಚಾರದಲ್ಲೇ ಮುಳುಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ ಖರ್ಗೆ ರಾಜ್ಯದಲ್ಲಿ ಸೂಪರ್ ಸಿಎಂ ಆಗಿ ಕೆಲಸ ಮಾಡುತ್ತಿದ್ದಾರೆ. ಅವರು ಎಲ್ಲ ಇಲಾಖೆಗಳಲ್ಲಿ ಮೂಗು ತೂರಿಸುತ್ತಿದ್ದಾರೆ. ಗುತ್ತಿಗೆದಾರ ಸಚಿನ್ ಅವರು ಪ್ರಿಯಾಂಕ ಖರ್ಗೆ ಅವರ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡರೂ ಇನ್ನೂ ಅವರ ಮೇಲೆ ಕ್ರಮ ಕೈಗೊಂಡಿಲ್ಲ. ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ನಿರಂತರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಎರಡು ವರ್ಷದಲ್ಲಿ ಹತ್ಯೆ ಹಾಗೂ ಆತ್ಮಹತ್ಯೆಗಳೇ ಹೆಚ್ಚಾಗಿವೆ. ರಾಜ್ಯದ ಅನೇಕ ಆಸ್ಪತ್ರೆಗಳಲ್ಲಿ ಬಾಣಂತಿಯರ ಸರಣಿ ಸಾವಾಗುತ್ತಿದೆ. ಅಭಿವೃದ್ಧಿ ಮರೀಚಿಕೆಯಾಗಿದೆ. ಆದರೂ ನಮ್ಮದು ಅಭಿವೃದ್ಧಿ ಪರ ಎಂದು ಹೇಳಿಕೊಳ್ಳುವ ನೀವು ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಿ ಎಂದರು.
ಬಿಜೆಪಿ ತಾಲೂಕು ಘಟಕ ಅಧ್ಯಕ್ಷ ಜೆ.ಕೆ. ಸುರೇಶ್, ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಉಪಾಧ್ಯಕ್ಷ ಕೆ.ಪಿ. ಕುಪೇಂದ್ರಪ್ಪ, ರಮೇಶ್ ತರಗನಹಳ್ಳಿ, ಅರಕೆರೆ ನಾಗರಾಜ್, ಗಿರೀಶ್, ಶಿವಾನಂದ್, ಕೂಲಂಬಿ ಸಿದ್ದಲಿಂಗಪ್ಪ, ತೊಳಕಿ ಹಾಲೇಶ್, ಪುರಸಭೆ ಮಾಜಿ ಅಧ್ಯಕ್ಷ ರಂಗನಾಥ್, ಕೆ.ವಿ.ಶ್ರೀಧರ್, ಈರಣ್ಣ, ಅಜ್ಜಯ್ಯ, ಬೇಲಿಮಲ್ಲೂರು ಬೀರಪ್ಪ ಸೇರಿ ಅನೇಕ ಬಿಜೆಪಿ ಕಾರ್ಯಕರ್ತರಿದ್ದರು.