ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ

8adarshkdga4
Published on

ಮಡಿಕೇರಿ: ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.


ನಗರದ ತಾಲೂಕು ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.


ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಜಿ.ಬೋಪಯ್ಯ, ನೂರು ದಿನದ ಆಡಳಿತದಲ್ಲಿ ನುಡಿದಂತೆ ನಡೆದಿದ್ದೇವೆ ಎನ್ನುತ್ತಿರುವ ಕಾಂಗ್ರೆಸ್ ವಿರುದ್ದ ಜನಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳೂ ಗೊಂದಲದಿಂದ ಕೂಡಿದೆ. ವಿದ್ಯುತ್ತನ್ನೇ ಅವಲಂಬಿಸಿದ್ದ ಉದ್ಯಮಗಳ ಕಥೆ ಮುಗಿಸಿದ್ದಾರೆ. ನಿರಂತರವಾಗಿ ಜನರನ್ನು ವಂಚಿಸುವ ಕೆಲಸ ಮಾಡುತ್ತಿದ್ದಾರೆ. ವರ್ಗಾವಣೆ ದಂಧೆ ಬಿಟ್ಟರೆ ಇನ್ಯಾವ ಅಭಿವೃದ್ಧಿ ಕೆಲಸವೂ ಆಗುತ್ತಿಲ್ಲ ಎಂದು ಕಿಡಿ ಕಾರಿದರು.


ಬಿಜೆಪಿ ಸರ್ಕಾರದ ಅವಧಿಯಲ್ಲಿ ೧೫೦ ಕೋಟಿ ರೂಪಾಯಿ ಅನುದಾನವನ್ನು ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಮೀಸಲಿಡಲಾಗಿತ್ತು. ಅದನ್ನು ಕಾಂಗ್ರೆಸ್ ಸರ್ಕಾರ ೧೨೦ ಕೋಟಿಗೆ ಇಳಿಸಿದೆ. ನಾಗರಹೊಳೆ ಸುತ್ತಮುತ್ತಲಿನ ರೈಲ್ವೆ ಬ್ಯಾರಿಕೇಡ್ ಅಳವಡಿಕೆ ಕೇಂದ್ರ ಸರ್ಕಾರದ ಯೋಜನೆ. ಎಲ್ಲದಕ್ಕೂ ಕೇಂದ್ರ ಸರ್ಕಾರವೇ ಹಣ ಬಿಡುಗಡೆ ಮಾಡುವುದಾದರೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದು ಏನು ಪ್ರಯೋಜನ ಎಂದು ಪ್ರಶ್ನಿಸಿದ ಬೋಪಯ್ಯ, ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ಮನೆಗೆ ಹೋಗಿ. ಕೇಂದ್ರವೇ ಎಲ್ಲವನ್ನೂ ನೋಡಿಕೊಳ್ಳಲಿದೆ ಎಂದು ಕುಟುಕಿದರು.


ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಅತಿವೃಷ್ಟಿಯೂ ಉಂಟಾಗಿತ್ತು. ಆದರೆ, ಕಾಂಗ್ರೆಸ್ ಆಡಳಿತದಲ್ಲಿ ಬರಗಾಲ ಬಂದಿದೆ. ಬಿಜೆಪಿ ಸರ್ಕಾರ ರೈತರಿಗಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ಕಾಂಗ್ರೆಸ್ ರದ್ದುಗೊಳಿಸಿದೆ. ೨೦೦ ಯೂನಿಟ್ ಉಚಿತ ವಿದ್ಯುತ್ ವಿಚಾರದಲ್ಲೂ ಅನ್ಯಾಯ ಮಾಡಿದೆ. ಕೊಡಗಿನಲ್ಲಿ ಲೋಡ್ ಶೆಡ್ಡಿಂಗ್ ಇರಲಿಲ್ಲ. ಬಿಜೆಪಿ ಅವಧಿಯಲ್ಲೂ, ಎಂ.ಸಿ.ನಾಣಯ್ಯ ಮಂತ್ರಿಗಳಾಗಿದ್ದಾಗಲೂ ಲೋಡ್ ಶೆಡ್ಡಿಂಗ್ ನಿಯಂತ್ರಣದಲ್ಲಿತ್ತು. ಈಗ ಜಿಲ್ಲೆಯಲ್ಲಿ ಲೋಡ್ ಶೆಡ್ಡಿಂಗ್ ಜಾರಿಗೆ ತಂದಿದ್ದು ಖಂಡನೀಯ ಎಂದರು.


ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ನಾಗೇಶ್ ಕುಂದಲ್ಪಾಡಿ, ರೈತ ಮೋರ್ಚಾ ರಾಜ್ಯ ಸಮಿತಿ ಸದಸ್ಯ ಯಮುನಾ ಚಂಗಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಮಡಿಕೇರಿ ನಗರಾಧ್ಯಕ್ಷ ಮನು ಮಂಜುನಾಥ್, ಪ್ರಮುಖರಾದ ರವಿ ಕಾಳಪ್ಪ, ಸುಬ್ರಮಣಿ ಉಪಾಧ್ಯಾಯ, ಅರುಣ್ ಕುಮಾರ್, ಸವಿತಾ ರಾಕೇಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net