ಮಂಡ್ಯ: ಕೃಷಿ ಕೂಲಿಕಾರರಿಗೆ ಸಾಮಾಜಿಕ ಭದ್ರತೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಾಂತ ಕೃಷಿ ಕೂಲಿಕಾರರ ಸಂಘ, ಸಿಐಟಿಯು, ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಸರ್ ಎಂ.ವಿ. ಪ್ರತಿಮೆ ಬಳಿ ಜಮಾಯಿಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಕೆಲ ಕಾಲ ಧರಣಿ ನಡೆಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ದೇಶಕ್ಕೆ ಸ್ವಾತಂತ್ರ್ಯ ಬಂದು 77 ವರ್ಷ ಕಳೆಯುತ್ತಿದ್ದರೂ, ರೈತರು ಬೆಳೆಯುವ ಬೆಳೆಗೆ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ. ಪರಿಣಾಮ ಕೃಷಿ ಬಿಕ್ಕಟ್ಟಿಗೆ ಸಿಲುಕಿದ್ದು, ಕೃಷಿ ಉತ್ಪಾದನಾ ವೆಚ್ಚ ಹೆಚ್ಚಾಗುತ್ತಿದೆ. ಇದರಿಂದಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಮತ್ತೊಂದೆಡೆಗೆ ರೈತರ ಭೂಮಿಯನ್ನು ಕಸಿದುಕೊಂಡು ಕಾರ್ಪೋರೇಟ್ ಕೃಷಿಗೆ ಅವಕಾಶ ನೀಡಲಾಗುತ್ತಿದೆ. ಇದು ರೈತರನ್ನು ನಾಶಗೊಳಿಸುವ ನೀತಿಯಾಗಿದೆ. ರಸಗೊಬ್ಬರದ ಸಬ್ಸಿಡಿ ರದ್ದುಪಡಿಸಲಾಗಿದೆ. ಇದರಿಂದಾಗಿ 19 ಕೋಟಿಗಿಂತಲೂ ಹೆಚ್ಚು ಜನರು ಭೂರಹಿತ ಕೃಷಿ ಕೂಲಿಕಾರ್ಮಿಕರಾಗಿದ್ದಾರೆ. ಕನಿಷ್ಟ ಕೂಲಿ, ಸಾಮಾಜಿಕ ರಕ್ಷಣೆಯೂ ಇಲ್ಲದೆ ಪರದಾಡುತ್ತಿದ್ದಾರೆ. ಕೂಲಿಕಾರರ ರಕ್ಷಣೆಗೆ ಸಮಗ್ರ ಕಾನೂನು ಜಾರಿಗೊಳಿಸಬೇಕು ಎಂದು ಹಲವು ದಶಕಗಳಿಂದ ನಿರಂತರವಾಗಿ ಹೋರಾಟ ಮಾಡಲಾಗುತ್ತಿದೆ. ಆದರೂ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಕಿಡಿಕಾರಿದರು.
ಆದ್ದರಿಂದ ದುಡಿತದ ಅವಧಿಯನ್ನು ದಿನಕ್ಕೆ 12 ಗಂಟೆಗೆ ಹೆಚ್ಚಿಸಿರುವ ಆದೇಶ ಹಿಂಪಡೆಬೇಕು. ಜೀವನ ಯೋಗ್ಯ ಕನಿಷ್ಟ ವೇತನ 31,500 ರೂಗೆ ಹೆಚ್ಚಿಸಬೇಕು. ಸಾರ್ವತ್ರಿಕ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಿ ಕನಿಷ್ಟ 8 ಸಾವಿರ ರೂ ಪಿಂಚಣಿ ನೀಡಬೇಕು. ಸಾರ್ವಜನಿಕ ಉದ್ದಿಮೆಗಳ ಖಾಸಗಿಕರಣ ಮತ್ತು ನಗದೀಕರಣ ನಿಲ್ಲಿಸಬೇಕು. ಉದ್ಯೋಗ ಖಾತ್ರಿ ಯೋಜನೆ ಮನರೇಗಾ ದುಡಿತದ ದಿನಗಳನ್ನು 200 ರೂಗೆ ಹೆಚ್ಚಿಸಿ, ದಿನಕ್ಕೆ 600 ರೂ ಕೂಲಿ ನೀಡಬೇಕು. ಆಶಾ, ಅಂಗನವಾಡಿ ಮತ್ತು ಬಿಸಿಯೂಟ ಕಾರ್ಮಿಕರನ್ನು ಕನಿಷ್ಟ ವೇತನ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ವಲಸೆ ಕಾರ್ಮಿಕರಿಗೆ ಸೇವಾ ಭದ್ರತೆ ಮತ್ತು ಸಾರ್ವತ್ರಿಕ ಪಡಿತರ ವ್ಯವಸ್ಥೆ ಜಾರಿ, ಅಸಂಘಟಿತ ವಲಯದ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ಖಾತ್ರಿಗೊಳಿಸಿ ಮತ್ತು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಬೇಕು. ಡಾ.ಸ್ವಾಮಿನಾಥನ್ ವರದಿ ಜಾರಿ ಮಾಡಬೇಕು. ಪಡಿತರದಲ್ಲಿ ನಗದು ಬದಲಿಗೆ ಆಹಾರ ಧಾನ್ಯಗಳನ್ನು ನೀಡಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸ್ಮಶಾನಕ್ಕೆ ಜಾಗ ಮೀಸಲಿಡಬೇಕು. ಮೂಲ ಸೌಕರ್ಯ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಿಐಟಿಯು ಅಧ್ಯಕ್ಷ ಎಂ.ಎಲ್.ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ಎಂ.ಪುಟ್ಟಮಾದು, ಬಿ.ಹನುಮೇಶ್, ಟಿ.ಎಲ್.ಕೃಷ್ಣೇಗೌಡ, ಮಹದೇವಮ್ಮ, ಎನ್.ಎಲ್.ಭರತ್‌ರಾಜ್, ಚಂದ್ರಶೇಖರ್, ತಿಮ್ಮೇಗೌಡ ಇತರರಿದ್ದರು.