ಭಕ್ತರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿ

06 HANUR 2.
ಮಲೆಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಮಹಾಲಯ ಅಮಾವಾಸ್ಯೆ, ದೀಪಾವಳಿ ಜಾತ್ರೆ ಸಂಬಂಧ ಅಗತ್ಯ ಸಿದ್ಧತೆ ಕುರಿತು ಪ್ರಾಧಿಕಾರದ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಪ್ರಕಾಶ್, ಸುನೀಲ್, ಶಂಕರ್, ಚಂದ್ರಶೇಖರ್, ಮೂರ್ತಿ ಇತರರು ಇದ್ದರು.
Published on

ಹನೂರು: ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವುದರ ಮೂಲಕ ಯಾವುದೇ ಲೋಪವಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ತಿಳಿಸಿದರು.

ಮ.ಬೆಟ್ಟದ ನಾಗಮಲೆ ಭವನದಲ್ಲಿ ಶುಕ್ರವಾರ ಮಹಾಲಯ ಅಮಾವಾಸ್ಯೆ, ಆಯುಧ ಪೂಜಾ ಹಾಗೂ ದೀಪಾವಳಿ ಜಾತ್ರೆ ಸಂಬಂಧ ಕೈಗೊಳ್ಳಬೇಕಾದ ಅಗತ್ಯ ಸಿದ್ಧತೆ ಕುರಿತು ಆಯೋಜಿಸಿದ್ಧ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಮಹಾಲಯ ಅಮಾವಾಸ್ಯೆ, ದೀಪಾವಳಿ ಜಾತ್ರೆ ಹಾಗೂ ಕಾರ್ತಿಕ ಸೋಮವಾರಗಳಂದು ತಮಿಳುನಾಡು ಹಾಗೂ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಮ.ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಈ ದಿಸೆಯಲ್ಲಿ ಆಗಮಿಸುವ ಭಕ್ತರಿಗೆ ಅಗತ್ಯ ಮೂಲ ಸೌಕರ್ಯವನ್ನು ಒದಗಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಈ ದಿಸೆಯಲ್ಲಿ ಆಯಾ ಇಲಾಖೆಯ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಭಕ್ತರಿಗೆ ತೊಂದರೆಯಾಗಬಾರದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯೋನ್ಮುಖರಾಗಬೇಕು ಎಂದು ತಿಳಿಸಿದರು.

ಸಮರ್ಪಕ ಬಸ್ ಸೌಕರ್ಯ ಒದಗಿಸಿ: ಜಾತ್ರಾ ಸಂದರ್ಭದಲ್ಲಿ ಸುಮಾರು 3-4 ಲಕ್ಷಕ್ಕೂ ಹೆಚ್ಚು ಭಕ್ತರು ಮ.ಬೆಟ್ಟಕ್ಕೆ ಆಗಮಿಸುವುದು ಸಾಮಾನ್ಯ. ಆದರೆ ಈಗ ಶಕ್ತಿ ಯೋಜನೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುತ್ತಾರೆ. ಹಾಗಾಗಿ ಭಕ್ತರ ಸಂಖ್ಯೆಗೆ ಅನುಗುಣವಾಗಿ ಬಸ್ ಸೌಕರ್ಯ ಒದಗಿಸಬೇಕು. ಹಾಗೆಯೇ ತಮಿಳುನಾಡಿನ ಬಸ್ ಸೌಕರ್ಯದ ಬಗ್ಗೆ ಮಾಹಿತಿ ಪಡೆಯಬೇಕು. ಈ ಬಗ್ಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ರೀತಿಯಲ್ಲೂ ತೊಂದರೆಯಾಗಬಾರದು ಎಂದು ಸಾರಿಗೆ ಇಲಾಖೆ ಸಂಚಾರ ನಿಯಂತ್ರಣಾಧಿಕಾರಿ ದಶರಥ್ ಅವರಿಗೆ ಸೂಚಿಸಿದರು. ಇನ್ನು ಹಾಳಾಗಿರುವ ಕಡೆ ರಸ್ತೆಯನ್ನು ತುರ್ತಾಗಿ ರಿಪೇರಿ ಪಡಿಸಬೇಕು. ಗಣ್ಯ ವ್ಯಕ್ತಿಗಳ ಅತಿಥಿಗೃಹವನ್ನು ಪ್ರಾಧಿಕಾರಕ್ಕೆ ಕಾಯ್ದಿರಿಸಬೇಕು ಹಾಗೂ ರಥೋತ್ಸವದ ತೇರಿಗೆ ದೃಢೀಕರಣ ನೀಡಬೇಕು ಎಂದು ಪಿಡಬ್ಯುಡಿ ಎಇಇ ಚಿನ್ನಣ್ಣ ಅವರಿಗೆ ಸೂಚಿಸಿದರು.

ತಾತ್ಕಾಲಿಕ ಆಸ್ಪತ್ರೆ ತೆರೆಯಿರಿ: ಜಾತ್ರಾ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕಾಲ್ನಡಿಗೆಯ ಮೂಲಕ ತಾಳುಬೆಟ್ಟದಲ್ಲಿ ವಾಸ್ತವ್ಯ ಹೂಡಿ ಮ.ಬೆಟ್ಟಕ್ಕೆ ಆಗಮಿಸುತ್ತಾರೆ. ಆದ್ದರಿಂದ ತಾಳುಬೆಟ್ಟದಲ್ಲಿ ತಾತ್ಕಾಲಿಕ ಆಸ್ಪತ್ರೆ ತೆರೆದು ಅಗತ್ಯ ವೈದ್ಯ, ಸಿಬ್ಬಂದಿ ನಿಯೋಜಿಸಬೇಕು. ಭಕ್ತರು ಪರ ಮಾಡುವ ಆಹಾರವನ್ನು ಪರೀಕ್ಷಿಸಬೇಕು. ಹೆಚ್ಚುವರಿ ತುರ್ತು ವಾಹನವಿರುವಂತೆ ನೋಡಿಕೊಳ್ಳಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್ ಅವರಿಗೆ ಸೂಚಿಸಿದರು.

ಮ.ಬೆಟ್ಟ ಹಾಗೂ ಹೆಚ್ಚು ಜನಸಂದಣಿ ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಸೂಕ್ತ ಪೋಲಿಸ್ ಬಂದೋಬಸ್ತ್ ಒದಗಿಸಬೇಕು. ಟ್ರಾಫಿಕ್ ಜಾಮ್ ತಡೆಗಟ್ಟುವ ನಿಟ್ಟಿನಲ್ಲಿ ತಾಳುಬೆಟ್ಟದಿಂದ ಮ.ಬೆಟ್ಟದವರೆಗೆ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮವಹಿಸಬೇಕು ಎಂದು ಇನ್ಸ್‌ಪೆಕ್ಟರ್ ನಂಜುಂಡಸ್ವಾಮಿ ಅವರಿಗೆ ಸೂಚಿಸಿದರು.

ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ: ಮ.ಬೆಟ್ಟ ಧಾರ್ಮಿಕ ಪುಣ್ಯ ಸ್ಥಳ. ಆದರೆ ಇಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಜತೆಗೆ ಇತ್ತೀಚಿಗಷ್ಟೇ ವಸತಿ ಗೃಹದಲ್ಲೂ ಮದ್ಯ ಸೇವನೆ ಪ್ರಕರಣ ನಡೆದಿದೆ. ಇದರಿಂದ ಪಾವಿತ್ರ್ಯತೆಗೆ ದಕ್ಕೆಯಾಗಲಿದೆ. ಆದ್ದರಿಂದ ಈ ಬಗ್ಗೆ ಅಗತ್ಯ ಕ್ರಮವಹಿಸಿ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವುದರ ಮೂಲಕ ಮ.ಬೆಟ್ಟವನ್ನು ಮದ್ಯಪಾನ ಮುಕ್ತ ಪ್ರದೇಶವಾಗಿಸಲು ಹೆಚ್ಚಿನ ಒತ್ತು ನೀಡಬೇಕು. ಈ ಬಗ್ಗೆ ಪ್ರಾಧಿಕಾರ ಹಾಗೂ ಗ್ರಾಮ ಪಂಚಾಯಿತಿ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಬಕಾರಿ ನಿರೀಕ್ಷಕ ಸುನೀಲ್ ಅವರಿಗೆ ಸೂಚಿಸಿದರು.

ಜಾತ್ರೆ ಸಂದರ್ಭದಲ್ಲಿ ನಿರಂತರ ವಿದ್ಯುತ್ ವ್ಯವಸ್ಥೆ ಕಲ್ಪಿಸಬೇಕು. ಯಾವುದೇ ಕಾರಣಕ್ಕೂ ವಿದ್ಯುತ್ ವ್ಯತ್ಯಯವಾಗಬಾರದು ಎಂದು ಸೆಸ್ಕ್ ಎಇಇ ಶಂಕರ್ ಅವರಿಗೆ ಸೂಚಿಸಿದರು. ಕುಡಿಯುವ ನೀರಿನ ತೊಂಬೆಗಳು, ರಸ್ತೆ, ಚರಂಡಿಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಹೋಟೆಲ್ ಹಾಗೂ ಖಾಸಗಿ ವಸತಿ ಗೃಹಗಳಲ್ಲಿ ಶುಚಿತ್ವದ ಬಗ್ಗೆ ಪರಿಶೀಲಿಸಬೇಕು ಎಂದು ಪಿಡಿಒ ಕಿರಣ್ ಅವರಿಗೆ ತಾಕೀತು ಮಾಡಿದರು.

ಸಭೆಯಲ್ಲಿ ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಬೇಡಗಂಪಣ ಮುಖಂಡ ಪುಟ್ಟಣ್ಣ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net