More

    ಸಾಮಾನ್ಯ ಪ್ರವೇಶ ಪರೀಕ್ಷೆ 20, 21ರಂದು

    ಹಾವೇರಿ: ನಗರದ ಒಂಭತ್ತು ಪರೀಕ್ಷಾ ಕೇಂದ್ರಗಳಲ್ಲಿ ಮೇ 20 ಮತ್ತು 21ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದೆ. ಜಿಲ್ಲೆಯ 3,877 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪದೋಷವಾದಂತೆ ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಪರೀಕ್ಷಾ ಕೇಂದ್ರಗಳಿಗೆ ನಿಯೋಜಿತ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಸೂಚಿಸಿದರು.
    ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಾರದರ್ಶಕ ಹಾಗೂ ಸುವಸ್ಥಿತವಾಗಿ ಪರೀಕ್ಷೆ ನಡೆಸಬೇಕು. ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಲಾದ ವೀಕ್ಷಕರ ಪಾತ್ರ ಬಹಳ ಮುಖ್ಯವಾಗಿದ್ದು, ಪರೀಕ್ಷಾ ಅವಧಿ ಆರಂಭದ ಮೊದಲು ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಿ, ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಬಗ್ಗೆ ಪರೀಶಿಲಿಸಬೇಕು. ಪರೀಕ್ಷೆ ಮುಗಿದ ನಂತರ ಪರೀಕ್ಷಾ ಕೇಂದ್ರದಲ್ಲಿ ಎಲ್ಲ ಕಾರ್ಯಗಳ ಬಗ್ಗೆ ವರದಿ ಸಿದ್ಧಪಡಿಸಿ ಆನ್‌ಲೈನ್‌ನಲ್ಲಿ ದಾಖಲಿಸುವಂತೆ ಸಲಹೆ ನೀಡಿದರು.
    ಪರೀಕ್ಷಾ ಕೇಂದ್ರಗಳ ಪ್ರತಿ ಕೊಠಡಿಯಲ್ಲಿ ಗಡಿಯಾರ ಹಾಗೂ ಸಿಸಿ ಕ್ಯಾಮರಾ ಅಳವಡಿಸಬೇಕು. ವಿಜ್ಞಾನ ಉಪನ್ಯಾಸಕರನ್ನು ಹೊರತುಪಡಿಸಿ 24 ವಿದ್ಯಾರ್ಥಿಗಳಿಗೆ ಒಬ್ಬರಂತೆ ಕೊಠಡಿ ಮೇಲ್ವಿಚಾರರನ್ನು ಲಾಟರಿ ಮೂಲಕ ಆಯ್ಕೆ ಮಾಡಿ ಕರ್ತವ್ಯಕ್ಕೆ ನಿಯೋಜಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯ ಮಕ್ಕಳು ಸಿಇಟಿ ಪರೀಕ್ಷೆ ಬರೆಯುತ್ತಿರಬಾರದು ಎಂದರು.
    ಪರೀಕ್ಷಾರ್ಥಿಗಳು ಉದ್ದತೋಳಿನ ಉಡುಪು ಧರಿಸುವಂತಿಲ್ಲ, ಪರೀಕ್ಷಾ ಕೇಂದ್ರಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಿಲ್ಲ. ಆದರೆ ಎನ್95 ಮಾಸ್ಕ್ ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು. ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಹಾಯಕರ ನಿಯೋಜನೆಗೆ ಹಾಗೂ ಪೊಲೀಸ್ ಬಂದೋಬಸ್ತ್‌ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
    ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಉಮೇಶಪ್ಪ ಮಾತನಾಡಿ, ಪರೀಕ್ಷಾ ಮಾರ್ಗಸೂಚಿಗಳನ್ನು, ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಳ್ಳಬೇಕಾದ ಚಟುವಟಿಕೆಗಳು ಕುರಿತು ಮಾಹಿತಿ ನೀಡಿದರು.
    ಸಭೆಯಲ್ಲಿ ಡಿ.ವೈ.ಎಸ್.ಪಿ. ಶಿವಾನಂದ ಚಲವಾದಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ವಿನಾಯಕ ಜೋಶಿ, ವಿವಿಧ ತಾಲೂಕುಗಳ ತಹಶೀಲ್ದಾರ್‌ಗಳು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

    ಪರೀಕ್ಷಾ ಕೇಂದ್ರಗಳು:
    ಹಾವೇರಿ ನಗರದ ಗುದ್ಲೆಪ್ಪ ಹಳ್ಳಿಕೇರಿ ಪದವಿಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಸೇಂಟ್ ಆನ್ಸ್ ಪದವಿಪೂರ್ವ ಕಾಲೇಜು, ಸರ್ಕಾರಿ ಪದವಿಪೂರ್ವ ಕಾಲೇಜು, ಚನಬಸಪ್ಪ ಮಾಗಾವಿ ಪ್ರೌಢಶಾಲೆ, ಎಸ್.ಎಂ.ಎಸ್. ಪದವಿಪೂರ್ವ ಕಾಲೇಜು, ಎಸ್.ಜೆ.ಎಂ. ಪದವಿಪೂರ್ವ ಕಾಲೇಜು, ಲಯನ್ಸ್ ಪದವಿಪೂರ್ವ ಕಾಲೇಜು ಹಾಗೂ ಹುಕ್ಕೇರಿ ಮಠ ಎಸ್.ಎಸ್. ಪದವಿಪೂರ್ವ ಕಾಲೇಜುಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ವಿಡಿಯೋ ಚಿತ್ರೀಕರಿಸಿ
    ಪರೀಕ್ಷಾ ಕೇಂದ್ರಗಳಿಗೆ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳ ರವಾನೆಗೆ ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಒಳಗೊಂಡ ತ್ರಿಸದಸ್ಯ ರೂಟ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಆಯಾ ಪರೀಕ್ಷಾ ಕೇಂದ್ರದವರು ವಿಡಿಯೋ ಗ್ರಾಫರ ನೇಮಕ ಮಾಡಿಕೊಳ್ಳಬೇಕು. ಪರೀಕ್ಷಾ ಚಟುವಟಿಕೆಗಳ ವಿಡಿಯೋ ಚಿತ್ರೀಕರಣ ಮಾಡಬೇಕು. ಯಾವುದೇ ಕಾರಣಕ್ಕೂ ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳ ಚಿತ್ರೀಕರಣ ಮಾಡಬಾರದು ಎಂದು ಎಡಿಸಿ ಹೇಳಿದರು.

    ನಿಷೇಧಾಜ್ಞೆ ಜಾರಿ
    ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರವೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಝರಾಕ್ಸ್, ಸೈಬರ್ ಕೆಫೆಗಳನ್ನು ಮುಚ್ಚಲು ಆದೇಶಿಸಲಾಗಿದೆ. ಆತ್ಯಾಧುನಿಕ ಇಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಪೇಜರ್, ವೈರ್‌ಲೆಸ್ ಸೆಟ್, ಲಾಗ್ ಟೇಬಲ್, ಕ್ಯಾಲ್ಕುಲೇಟರ್ ಹಾಗೂ ರಿಸ್ಟ್ ವಾಚಗಳನ್ನು ವಿದ್ಯಾರ್ಥಿಗಳು ಹಾಗೂ ಕೊಠಡಿ ಮೇಲ್ವಿಚಾರಕರು ಪರೀಕ್ಷಾ ಕೇಂದ್ರಗಳಿಗೆ ತರುವುದನ್ನು ನಿಷೇಧಿಸಲಾಗಿದೆ ಎಂದು ಎಡಿಸಿ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts