ಬಾಳೆಹೊನ್ನೂರು: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ 37 ಕೇಂದ್ರಗಳಲ್ಲಿ ಭಾನುವಾರ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಡಳಿತ ವೈದ್ಯಾಧಿಕಾರಿ ಡಾ. ಪ್ರವೀಣ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪೋಲಿಯೋ ಸೋಂಕು ತಗುಲಿದರೆ ಪಾರ್ಶ್ವವಾಯು, ಅಂಗವಿಕಲತೆಯೊಂದಿಗೆ ಅನೇಕ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲದೆ ಸಾವು ಕೂಡ ಸಂಭವಿಸಬಹುದು. ಹೀಗಾಗಿ ಪಾಲಕರು ಈ ಮಾರಕ ರೋಗವನ್ನು ತಡೆಗಟ್ಟಲು ತಮ್ಮ ಮಕ್ಕಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು ಎಂದರು.
ಭಾರತವು ಈಗಾಗಲೇ ಪೋಲಿಯೋ ಮುಕ್ತ ರಾಷ್ಟ್ರವಾಗಿದೆ. ಆದರೆ ಕೆಲವು ದೇಶಗಳಲ್ಲಿ ಇನ್ನೂ ಪೋಲಿಯೋ ಭೀತಿಯಿದೆ. ಈ ಹಿನ್ನೆಲೆಯಲ್ಲಿ ನಮ್ಮ ದೇಶದಲ್ಲಿ ಮರುಕಳಿಸುವ ಸಾಧ್ಯತೆ ಇರುವುದರಿಂದ ಪೋಲಿಯೋ ಲಸಿಕಾ ಅಭಿಯಾನ ಜಾರಿಗೊಳಿಸಿದ್ದು ಇದರಿಂದಾಗಿ ಸಾಕಷ್ಟು ಪ್ರಗತಿ ಕಂಡು ಬಂದಿದೆ. 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ ಪೋಲಿಯೋ ಮುಕ್ತ ರಾಷ್ಟ್ರದ ಗುರಿಯನ್ನು ಮುಂದುವರೆಸಲು ಸಹಕರಿಸಬೇಕು ಎಂದು ಕೋರಿದರು.
ದೇಶಾದ್ಯಂತ ಹಮ್ಮಿಕೊಂಡಿರುವ ಪೋಲಿಯೋ ರೋಗ ನಿರ್ಮೂಲನಾ ಕಾರ್ಯಕ್ರಮದ ಸದುಪಯೋಗವನ್ನು ಪಾಲಕರು ಪಡೆದುಕೊಳ್ಳಬೇಕು. ಈ ಬಾರಿ ಒಂದೇ ಸಲ ಪೋಲಿಯೋ ಲಸಿಕೆ ಹಾಕಲಾಗುತ್ತಿದೆ. ಪೋಲಿಯೋ ನಿರ್ಮೂಲನೆಗಾಗಿ ಆರೋಗ್ಯ ಇಲಾಖೆ, ರೋಟರಿ, ಲಯನ್ಸ್, ಜೆಸಿಐ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಅನನ್ಯ ಸೇವೆ ಸಲ್ಲಿಸುತ್ತಿವೆ ಎಂದರು.
ಗ್ರಾಪಂ ಅಧ್ಯಕ್ಷ ಎಂ.ವಿ.ಸದಾಶಿವ ಆಚಾರ್ಯ, ರೋಟರಿ ಕ್ಲಬ್ ಅಧ್ಯಕ್ಷ ಎ.ಆರ್.ಸುರೇಂದ್ರ, ಜೆಸಿಐ ಅಧ್ಯಕ್ಷ ಎನ್.ಶಶಿಧರ್, ಲಯನ್ಸ್ ಅಧ್ಯಕ್ಷ ಎಂ.ಡಿ.ಶಿವರಾಮ್, ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷೆ ಮೇನಕಾ ಜಯಪ್ರಕಾಶ್, ತಾಲೂಕು ಕಸಾಪ ಅಧ್ಯಕ್ಷ ಎಸ್.ಎಚ್.ಪೂರ್ಣೇಶ್, ಹಿರಿಯ ಆರೋಗ್ಯ ಅಧಿಕಾರಿ ಭಗವಾನ್, ಆಶಾ ಕಾರ್ಯಕರ್ತೆಯರು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಇದ್ದರು.