

ವಿಟ್ಲ: ತೋಟಗಾರಿಕೆ ಇಲಾಖೆ ಬಂಟ್ವಾಳ ತಾಲೂಕು ಹಾಗೂ ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘ ಸಹಭಾಗಿತ್ವದಲ್ಲಿ ರೈತರಿಗೆ ಮಾಹಿತಿ ಕಾರ್ಯಕ್ರಮ ಸಂಘದ ಸಭಾಂಗಣದಲ್ಲಿ ಗುರುವಾರ ನಡೆಯಿತು.
ಪ್ರಗತಿಪರ ಕೃಷಿಕ ಮಹಾಲಿಂಗ ನಾಯ್ಕ ಅಮೈ ಉದ್ಘಾಟಿಸಿದರು. ಪುಣಚ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬೇಬಿ ಅಧ್ಯಕ್ಷತೆ ವಹಿಸಿದ್ದರು.
ವಿಟ್ಲ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ(ಸಿಪಿಸಿಆರ್‌ಐ) ವಿಜ್ಞಾನಿ ಡಾ.ಭವಿಷ್ಯ ಅಡಕೆ ಬೆಳೆಯಲ್ಲಿ ಎಲೆಚುಕ್ಕೆ ರೋಗ ಮತ್ತು ಅದರ ನಿರ್ವಹಣೆ ಹಾಗೂ ವೈಜ್ಞಾನಿಕ ಬೇಸಾಯ ಕ್ರಮಗಳ ಬಗ್ಗೆ ಹಾಗೂ ತೋಟಗಾರಿಕೆ ಇಲಾಖೆ ಪ್ರದೀಪ್ ಅಡಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ವಿಮೆ ಯೋಜನೆ ಕುರಿತು ಸಮಗ್ರ ಮಾಹಿತಿ ನೀಡಿದರು.
ಕೇಪು ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಘವ ಮಣಿಯಾಣಿ, ಪುಣಚ ಪ್ರಾಥಮಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಭಟ್ ಅಮೈ, ಉಪಾಧ್ಯಕ್ಷ ಪ್ರೀತಮ್ ಪೂಂಜ ಮತ್ತಿತರರು ಉಪಸ್ಥಿತರಿದ್ದರು. ತೋಟಗಾರಿಕೆ ಇಲಾಖೆಯ ದಿನೇಶ್ ಕಾರ್ಯಕ್ರಮ ನಿರೂಪಿಸಿದರು.