ಬೆಂಗಳೂರು: ಸಚಿವ ಜಮೀರ್ ಅಹಮ್ಮದ್ ಖಾನ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿ, ಜೀವ ಬೆದರಿಕೆ ಹಾಕಿದ ಆರೋಪದ ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಚಾಮರಾಜಪೇಟೆ ಠಾಣೆ ಪೊಲೀಸರು ಗುರುವಾರ ಆರೋಪಿ ಪುನೀತ್ ಕೆರೆಹಳ್ಳಿ ಅವರನ್ನು ನಗರದ ೫ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಪಡಿಸಿದ್ದರು. ವಿಚಾರಣೆ ಮಾಡಿದ ನ್ಯಾಯಾಧೀಶರು, ಆರೋಪಿಯನ್ನು ೧೪ ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದರು.
ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಇತ್ತೀಚೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕರಿಯಾ ಎಂಬ ಪದ ಬಳಕೆ ಮಾಡಿದ್ದರು. ಈ ಸಂಬಂಧ ಹಿಂದೂಪರ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಫೇಸ್‌ಬುಕ್‌ನಲ್ಲಿ ಸಚಿವ ಜಮೀನರ್ ಅಹಮ್ಮದ್ ಖಾನ್ ಅವರನ್ನು ನಿಂದಿಸಿ, ಜೀವ ಬೆದರಿಕೆ ಹಾಕಿದ್ದರು. ಈ ಸಂಬಂಧ ಸಚಿವರ ಆಪ್ತ ಸಹಾಯಕ ಬಿ.ಎಸ್.ಅಶೋಕ್ ಚಾಮರಾಜಪೇಟೆ ಠಾಣೆಗೆ ದೂರು ನೀಡಿದ್ದರು. ಈ ದೂರಿನನ್ವಯ ಪೊಲೀಸರು ಆರೋಪಿ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.