
ಮದ್ದೂರು: ಖಾಸಗಿ ಶಿಕ್ಷಣ ಸಂಸ್ಥೆಗಳು ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವುದು ಉತ್ತಮ ಬೆಳವಣಿಗೆ ಎಂದು ಶಾಸಕ ಕೆ.ಎಂ.ಉದಯ ಹರ್ಷ ವ್ಯಕ್ತಪಡಿಸಿದರು.
ತಾಲೂಕಿನ ಕೆಸ್ತೂರು ವಿವೇಕಾನಂದ ಎಜುಕೇಷನ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ವಿವೇಕಹಬ್ಬ-2025 ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ಶಾಲೆಗಳನ್ನು ನಡೆಸುವುದು ಸುಲಭದ ಕೆಲಸವಲ್ಲ. ಇದರ ನಡುವೆಯೂ ಗ್ರಾಮೀಣ ಮಕ್ಕಳ ಅಭ್ಯುದಯಕ್ಕೆ ಶ್ರಮಿಸುತ್ತಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು.
ಬಡತನ, ಅಜ್ಞಾನ ನಿವಾರಣೆಗೆ ಶಿಕ್ಷಣವೇ ಪ್ರಮುಖ ಅಸ್ತ್ರ. ಮುಂದೊಂದು ದಿನ ಶಿಕ್ಷಣ ಪಡೆದ ವಿದ್ಯಾರ್ಥಿಗಳು ವಿಶ್ವ ಮಾನವರನ್ನಾಗಿಸಲು ತಾವು ಪಡೆದ ಶಿಕ್ಷಣವೇ ಕಾರಣವಾಗಲಿದೆ. ಇದನ್ನರಿತು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದರು.
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿಶ್ಚಲಾನಂದನಾಥ ಶ್ರೀ ಮಾತನಾಡಿ, ಸಂಸ್ಕೃತಿ, ಸಂಸ್ಕಾರ ಜತೆಗೆ ಮೌಲ್ಯಯುತ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕು ಎಂದರು.
ಹಂಪಿ ಕನ್ನಡ ವಿಶ್ವವಿದ್ಯಾನಿಯಲಯದ ವಿಶ್ರಾಂತ ಪ್ರಾಧ್ಯಾಪಕ ಮತ್ತು ಕಥೆಗಾರರು ಡಾ. ಕರೀಗೌಡ ಬೀಚನಹಳ್ಳಿ ಹಾಗೂ ಪ್ರಸಿದ್ಧ ಗಾಯಕ, ಡಾ.ಅಪ್ಪಗೆರೆ ತಿಮ್ಮರಾಜು ಕುರಿತು ಮಾತನಾಡಿದರು. ವಾರ್ಷಿಕೋತ್ಸವ ಅಂಗವಾಗಿ ಪಾಲಕರು ಮತ್ತು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಗಣ್ಯರು ಬಹುಮಾನ ವಿತರಿಸಿದರು. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು.
ವಿವೇಕಾನಂದ ವಿದ್ಯಾ ಸಂಸ್ಥೆ ಅಧ್ಯಕ್ಷ ಸಿ.ನಾಗೇಗೌಡ, ಕಾರ್ಯದರ್ಶಿ ಎ.ಆರ್.ಶೋಭಾ, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಕೆ.ದಾಸೇಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಕೆ.ಆರ್.ಪಾಂಡುರಂಗ ಇತರರಿದ್ದರು.