ದೇವಸ್ಥಾನದಿಂದ ಹಿಂದಿರುಗುವಾಗ ಕೆರೆಗೆ ಉರುಳಿದ ಟ್ರ್ಯಾಕ್ಟರ್​: 26 ಯಾತ್ರಿಕರ ದುರ್ಮರಣ, ಪ್ರಧಾನಿ ಮೋದಿ ಸಂತಾಪ

Tractor
Published on

ಲಖನೌ: ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್​ ಟ್ರಾಲಿಯು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದ ಪರಿಣಾಮ 26 ಯಾತ್ರಿಕರು ದುರಂತ ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರ್​ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟ್ರ್ಯಾಕ್ಟರ್​ನಲ್ಲಿ ಒಟ್ಟು 50 ಮಂದಿ ಪ್ರಯಾಣಿಸುತ್ತಿದ್ದರು. ಉನ್ನಾವೋದಲ್ಲಿರುವ ಚಂದ್ರಿಕಾ ದೇವಿ ದೇವಸ್ಥಾನದಿಂದ ವಾಪಸ್​ ಬರುವಾಗ ಕಾನ್ಪುರದ ಘಟಾಂಪುರ್​ ಪ್ರದೇಶದ ಬಳಿ ದುರಂತ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪೊಲೀಸರು ಮತ್ತು ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಪ್ರಧಾನಿ ಮೋದಿ ಅವರು ಸಾವಿಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ನೀಡಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸಹ ಸಾವಿಗೆ ಸಂತಾಪ ಸೂಚಿಸಿದ್ದು, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಘಟನೆಯ ಬೆನ್ನಲ್ಲೇ ಪ್ರಯಾಣಕ್ಕೆ ಟ್ರ್ಯಾಕ್ಟರ್ ಟ್ರಾಲಿಯನ್ನು ಬಳಸದಂತೆ ಸಿಎಂ ಯೋಗಿ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕೃಷಿ ಕೆಲಸಗಳಿಗೆ ಮತ್ತು ಸರಕುಗಳನ್ನು ವರ್ಗಾಯಿಸಲು ಮಾತ್ರ ಟ್ರ್ಯಾಕ್ಟರ್-ಟ್ರಾಲಿ ಬಳಸಬೇಕು ಎಂದು ಅವರು ಒತ್ತಾಯಿಸಿದರು. ಯೋಗಿ ಅವರೇ ರಕ್ಷಣಾ ಕಾರ್ಯಾಚರಣೆಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಸರ್ಕಾರದ ವಕ್ತಾರರೊಬ್ಬರು ತಿಳಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net