

ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರು ತಮ್ಮ ಯಶಸ್ಸಿನ ಓಟವನ್ನು ಮುಂದುವರಿಸಿದ್ದು, ಭಾನುವಾರ (ಜುಲೈ 24) ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ ಪುರುಷರ ಜಾವಲಿನ್ ಥ್ರೋ ಫೈನಲ್ ಸ್ಪರ್ಧೆಯಲ್ಲಿ ಎರಡನೇ ಸ್ಥಾನದೊಂದಿಗೆ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.
4ನೇ ಎಸೆತದಲ್ಲಿ 88.13 ಮೀಟರ್ ಎಸೆತದೊಂದಿಗೆ ಬೆಳ್ಳಿ ಪದಕ ಜಯಿಸಿದ ನೀರಜ್, ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಪದಕ ಜಯಿಸಿದ ಎರಡನೇ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಲ್ಲದೆ, ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಮೊದಲ ಬೆಳ್ಳಿ ಪದಕ ಗೆದ್ದ ಕ್ರೀಡಾಪಟು ಎಂಬ ದಾಖಲೆ ಬರೆದಿದ್ದಾರೆ. 19 ವರ್ಷಗಳ ಬಳಿಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಭಾರತದಕ್ಕೆ ಪದಕ ಬಂದಿದೆ.
ಹಾಲಿ ಚಾಂಪಿಯನ್ ಆ್ಯಂಡರ್ಸನ್ ಪೀಟರ್ 90.14 ಮೀಟರ್ ಎಸೆಯುವುದರೊಂದಿಗೆ ತಮ್ಮ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವುದರ ಜೊತೆಗೆ ಚಿನ್ನದ ಪದಕವನ್ನು ಜಯಿಸಿದ್ದಾರೆ.
ಕಳೆದ ಶುಕ್ರವಾರ ನಡೆದ ಅರ್ಹತಾ ಸುತ್ತಿನ ಮೊದಲ ಎಸೆತದಲ್ಲೇ 88.39 ಮೀಟರ್ ಜಾವಲಿನ್ ಥ್ರೋ ಮಾಡುವ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ ಪುರುಷರ ಜಾವಲಿನ್ ಥ್ರೋ ಫೈನಲ್ಗೆ ನೀರಜ್ ಅರ್ಹತೆ ಪಡೆದಿದ್ದರು. ಇಂದು ನಡೆದ ಫೈನಲ್ ಪಂದ್ಯದಲ್ಲಿ ಎರಡನೇ ಸ್ಥಾನದೊಂದಿಗೆ ಬೆಳ್ಳಿ ಪದಕ ಜಯಿಸುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. (ಏಜೆನ್ಸೀಸ್)