More

    ಹನುಮ ಜಯಂತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ: ದೆಹಲಿ ಪೊಲೀಸರ ಕಟ್ಟೆಚ್ಚರ

    ನವದೆಹಲಿ: ಹನುಮ ಜಯಂತಿಯ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಪರಸ್ಪರ ಕಲ್ಲು ತೂರಾಟ ನಡೆಸಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿನ್ನೆ (ಏ.16) ರಾತ್ರಿ ನಡೆದಿದೆ. ದುಷ್ಕರ್ಮಿಗಳು ಅನೇಕ ವಾಹನಗಳಿಗೆ ಹಾನಿ ಮಾಡಿದ್ದು, ಪೊಲೀಸ್​ ಸಿಬ್ಬಂದಿಯು ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಾಬು ಜಗಜೀವನ ರಾಮ್​ ಮೆಮೊರಿಯಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆ ಸಂಬಂಧಿಸಿದ ದೃಶ್ಯಾವಳಿಗಳು ಲಭ್ಯವಾಗಿದ್ದು, ರಸ್ತೆಯ ವಿವಿಧ ಬದಿಗಳಲ್ಲಿ ಜನರ ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿರುವುದು ವಿಡಿಯೋದಲ್ಲಿ ಕಾಣಸಿಗುತ್ತದೆ. ಪೊಲೀಸರು ಪರಿಸ್ಥಿತಿ ನಿಭಾಯಿಸಲು ಮುಂದಾದಾಗ ಅವರ ಮೇಲೂ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

    ಘಟನೆಯ ಬಗ್ಗೆ ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ತಾನ ಟ್ವೀಟ್​ ಮಾಡಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಶಾಂತಿ ಕದಡುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಇದಲ್ಲದೆ, ಪ್ರದೇಶದಲ್ಲಿ ಗಸ್ತು ಹೆಚ್ಚಿಸಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿ ಮತ್ತು ಸುಳ್ಳು ಸುದ್ದಿಗಳಿಗೆ ಗಮನ ಕೊಡಬೇಡಿ ಎಂದು ನಾಗರಿಕರಿಗೆ ಮನವಿ ಮಾಡಿದ್ದಾರೆ.

    ಘಟನೆಯು ತಮ್ಮ ಗಮನಕ್ಕೆ ಬರುತ್ತಿದ್ದಂತೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ದೆಹಲಿ ಪೊಲೀಸ್​ ಆಯುಕ್ತ ಮತ್ತು ವಿಶೇಷ ಪೊಲೀಸ್​ ಆಯುಕ್ತ ದೀಪೇಂದ್ರ ಪಾಠಕ್ ಅವರೊಂದಿಗೆ ಮಾತನಾಡಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಕಾಪಾಡುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ಕಿಡಿಗೇಡಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಕಲ್ಲು ತೂರಾಟದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರೊಂದಿಗೆ ಕೇಂದ್ರವು ಸುಮಾರು 200 ಕ್ಷಿಪ್ರ ಕಾರ್ಯಾಚರಣೆ ಪಡೆ ಸಿಬ್ಬಂದಿಯನ್ನು ನಿಯೋಜಿಸಿದೆ. ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಹಿಂಸಾಚಾರ ಮತ್ತು ಕಲ್ಲು ತೂರಾಟದ ಘಟನೆಗಳನ್ನು ಖಂಡಿಸಿದ್ದಾರೆ. ಈ ದುಷ್ಕೃತ್ಯದ ಹಿಂದೆ ಇರುವವರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ನಗರದಲ್ಲಿ ಗುರುತಿಸಲಾದ ಎಲ್ಲಾ ಸೂಕ್ಷ್ಮ ಪ್ರದೇಶಗಳು/ಸ್ಥಳಗಳಿಗೆ ಪಡೆಗಳನ್ನು ನಿಯೋಜಿಸಲು ಮತ್ತು ಹಿರಿಯ ಅಧಿಕಾರಿಗಳ ನೇರ ಮೇಲ್ವಿಚಾರಣೆ ಮತ್ತು ಜವಾಬ್ದಾರಿಯ ಅಡಿಯಲ್ಲಿ ಮೊಬೈಲ್ ಗಸ್ತು ಮತ್ತು ಜಾಗರೂಕತೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸ್​ ಆಯುಕ್ತರಿಗೆ ಸೂಚಿಸಿದ್ದಾರೆ.

    ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಕಲ್ಲು ತೂರಾಟದ ಘಟನೆಯನ್ನು ಖಂಡಿಸಿದ್ದು, ಶಾಂತಿ ಕಾಪಾಡುವಂತೆ ಜನತೆಗೆ ಮನವಿ ಮಾಡಿದ್ದಾರೆ. ಶಾಂತಿಯನ್ನು ಕಾಪಾಡಿಕೊಳ್ಳಲು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ. ಇಲ್ಲದಿದ್ದರೆ, ದೇಶವು ಪ್ರಗತಿ ಸಾಧಿಸಲು ಸಾಧ್ಯವಿಲ್ಲ. ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯನ್ನು ಕಾಪಾಡುವ ಜವಾಬ್ದಾರಿ ಕೇಂದ್ರ ಸರ್ಕಾರಕ್ಕೆ ಇದೆ. ಶಾಂತಿಯನ್ನು ಕಾಪಾಡಲು ಜನರಿಗೆ ಮನವಿ ಮಾಡಿ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

    ಕೇಜ್ರಿವಾಲ್​ ಅವರು ರಾಜ್ಯಪಾಲ ಅನಿಲ್ ಬೈಜಾಲ್ ಅವರೊಂದಿಗೆ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದಾರೆ. ಶಾಂತಿಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಮತ್ತು ತಪ್ಪಿತಸ್ಥರನ್ನು ಬಿಡಲಾಗುವುದಿಲ್ಲ ಎಂದು ರಾಜ್ಯಪಾಲರು ಕೇಜ್ರಿವಾಲ್​ ಅವರಿಗೆ ಭರವಸೆ ನೀಡಿದ್ದಾರೆ. ಇದರೊಂದಿಗೆ ಬಿಜೆಪಿ ಮುಖಂಡರು ಸಹ ಘಟನೆಯನ್ನು ಖಂಡಿಸಿದ್ದಾರೆ. ಈ ಬಗ್ಗೆ ತನಿಖೆಗೆ ಒತ್ತಾಯಿಸಿದ್ದಾರೆ. (ಏಜೆನ್ಸೀಸ್​)

    ನೇಮಕಾತಿ ಅಕ್ರಮಕ್ಕಿಲ್ಲ ತಡೆಬೇಲಿ; ಮುಗಿಯದ ಪೊಲೀಸ್ ಹುದ್ದೆ ಗೋಲ್ಮಾಲ್: ಆರು ಆರೋಪಿಗಳ ಬಂಧನ

    ದೆಹಲಿಯಲ್ಲಿ ಕರೊನಾ ಏರಿಕೆ; 14 ಮಕ್ಕಳು ಸಹಿತ 53 ಸೋಂಕಿತರು ವಿವಿಧ ಆಸ್ಪತ್ರೆಗೆ ದಾಖಲು

    ಜಿಲ್ಲಾ ಕೇಂದ್ರಗಳಲ್ಲಿ ಕೈ ಹೋರಾಟ; ಆತ್ಮಹತ್ಯೆ ಪ್ರಕರಣ ಮರೆಮಾಚಲು ಕೋಮುಗಲಭೆ ಹುನ್ನಾರ ಶಂಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts