

ನವದೆಹಲಿ: ಸಂಸತ್ತಿನ ಆವರಣದಲ್ಲಿ ಮಾಧ್ಯಮಗಳಿಗೆ ಇರುವ ನಿಷೇಧವನ್ನು ತೆರವುಗೊಳಿಸಬೇಕು ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಮಾಡಿದರು.
ಪಂಜರದಲ್ಲಿ ಬಂಧಿತರಾಗಿರುವ ಮಾಧ್ಯಮಗಳಿಗೆ ಹೊರಬರಲು ಅವಕಾಶ ನೀಡುವಂತೆ ನಾನು ನಿಮ್ಮನ್ನು ವಿನಂತಿಸುತ್ತೇನೆ ಎಂದು ಲೋಕಸಭೆಯಲ್ಲಿ ರಾಹುಲ್ ಗಾಂಧಿ ಹೇಳಿದರು. ಸಂಸತ್ ಭವನದ ಪ್ರವೇಶ ಮತ್ತು ನಿರ್ಗಮನ ದ್ವಾರದ ಬಳಿ ಸಂಸದರ ಹೇಳಿಕೆಗಳನ್ನು ಪಡೆದುಕೊಳ್ಳಲು ಅವಕಾಶ ಇತ್ತು. ಆದರೆ ಈಗ ಪತ್ರಕರ್ತರಿಗೆ ಪ್ರತ್ಯೇಕ ಕೊಠಡಿ ಮಾಡಲಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ಓಂ ಬಿರ್ಲಾ ಅವರು, ಸಂಸತ್ತಿನ ಕಾರ್ಯವಿಧಾನಗಳ ನಿಯಮಗಳ ಬಗ್ಗೆ ರಾಹುಲ್ ಗಾಂಧಿ ಅವರಿಗೆ ನೆನಪಿಸಿದರು. ಇಂಥ ಸಂಗತಿಗಳನ್ನು ವೈಯಕ್ತಿಕವಾಗಿ ತಿಳಿಸಬೇಕು ಮತ್ತು ಸದನದಲ್ಲಿ ಪ್ರಸ್ತಾಪಿಸಬಾರದು ಎಂದು ಹೇಳಿದರು.
ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒಬ್ರಯಾನ್, ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಮತ್ತು ಶಿವಸೇನೆ-ಯುಬಿಟಿ ಸಂಸದ ಪ್ರಿಯಾಂಕಾ ಚತುರ್ವೇದಿ ಅವರು ಈ ವಿಷಯದ ಬಗ್ಗೆ ಧ್ವನಿ ಎತ್ತಿದರು.ವ ಇದು ಸೆನ್ಸಾರ್ಶಿಪ್. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಈ ಹೋರಾಟದಲ್ಲಿ ನಿಮ್ಮ ಜೊತೆ ನಾವಿದ್ದೇವೆ ಎಂದು ಎಂದು ಡೆರೆಕ್ ಒಬ್ರಯಾನ್ ಹೇಳಿದರು.
ಆ ಬಳಿಕ ಸ್ಪೀಕರ್ ಓಂ ಬಿರ್ಲಾ ಅವರು ಪತ್ರಕರ್ತರನ್ನು ಭೇಟಿಯಾಗಿ ನಿಮ್ಮ ಎಲ್ಲಾ ಕುಂದುಕೊರತೆಗಳನ್ನು ಪರಿಹರಿಸಲಾಗುವುದು. ಕರ್ತವ್ಯಗಳನ್ನು ನಿರ್ವಹಿಸಲು ಉತ್ತಮ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.