

ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅತ್ತ ಜಾರಿ ನಿರ್ದೇಶನಾಲಯದಿಂದ ತೀವ್ರ ವಿಚಾರಣೆಗೆ ಒಳಗಾಗುತ್ತಿದ್ದರೆ ಇತ್ತ ಆಕೆಯ ಪುತ್ರ, ಸಂಸದ ರಾಹುಲ್ ಗಾಂಧಿಯನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿಯನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಸಂಸದರು ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯಲ್ಲಿ ಪ್ರತಿಭಟನೆಯನ್ನು ಕೈಗೊಂಡಿದ್ದರು.
ಸಂಸತ್ತಿನಲ್ಲಿ ಹಣದುಬ್ಬರ, ನಿರುದ್ಯೋಗದಂಥ ವಿಷಯಗಳ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಅಲ್ಲದೆ ಪಕ್ಷದ ಕಾರ್ಯಕರ್ತರಿಗೆ ಎಲ್ಲೂ ಪ್ರತಿಭಟನೆಗೆ ಅವಕಾಶ ಕೊಡುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿರುವ ಸಂಸದರು ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಸದ್ ಭವನದಿಂದ ವಿಜಯ್ ಚೌಕದ ವರೆಗೆ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು, ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ.