

ಸೂರತ್: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ 30 ದಿನಗಳ ಜಾಮೀನು ಮಂಜೂರು ಮಾಡಿದೆ.
ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಸೂರತ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಕಾಂಗ್ರೆಸ್ ನಾಯಕನಿಗೆ ಜಾಮೀನು ಮಂಜೂರು ಮಾಡಿದ್ದಾರೆ ಮತ್ತು ವಿಚಾರಣೆಯನ್ನು ಏಪ್ರಿಲ್ 13ಕ್ಕೆ ಮುಂದೂಡಿದೆ.
2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮೋದಿ ಉಪನಾಮದ ಕುರಿತು ವ್ಯಂಗ್ಯವಾಡಿದ್ದರು. ಈ ಸಂಬಂಧ ಸೂರತ್ ನ್ಯಾಯಾಲಯದಲ್ಲಿ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ರಾಹುಲ್ ಗಾಂಧಿ ವಿರುದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ದಾಖಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯವು ಮಾರ್ಚ್ 23ರಂದು ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು ಮತ್ತು 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಿತ್ತು.