

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್ 10ರಂದು ಕೋಲಾರದಲ್ಲಿ ನಡೆಯಬೇಕಿದ್ದ ಜೈ ಭಾರತ್ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್ ಏಪ್ರಿಲ್ 10ರಂದು ಕೋಲಾರದಲ್ಲಿ ರಾಹುಲ್ ಗಾಂಧಿ ಅವರು ಜೈ ಭಾರತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಬೇಕಿತ್ತು. ಆದರೆ, ಅನಿವಾರ್ಯ ಕಾರಣಗಳಿಂದಾಗಿ ಕಾರ್ಯಕ್ರಮವನ್ನು ಏಪ್ರಿಲ್ 16ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಮೊದಲು ಏಪ್ರಿಲ್ 5ರಂದು ಕೋಲಾರದಲ್ಲಿ ಸಮಾವೇಶ ನಡೆಸಲಾಗುವುದು ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಆ ನಂತರ ಏಪ್ರಿಲ್ 10 ಎಂದು ಹೇಳಲಾಗಿತ್ತು.
ಒಟ್ಟಾರೆಯಾಗಿ ಎರಡು ಬಾರಿ ದಿನಾಂಕ ಬದಲಿಸುವ ಕಾಂಗ್ರೆಸ್ ನಾಯಕರು ಇದೀಗ ಏಪ್ರಿಲ್ 16ರಂದು ಸಮಾವೇಶ ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಪಾಲ್ಗೊಳಲಿದ್ದಾರೆ ಎಂದು ಹೇಳಿದ್ಧಾರೆ.
ಸಂಸತ್ ಸ್ಥಾನದಿಂದ ಅನರ್ಹಗೊಂಡ ಬಳಿಕ ರಾಹುಲ್ ಗಾಂಧಿ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಿರುವ ಮೊದಲ ಸಭೆ ಇದು. ಮೋದಿ ಉಪನಾಮ ಕುರಿತು ವ್ಯಂಗ್ಯವಾಡಿ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ಕಾರಣ ಅವರನ್ನು ಸಂಸತ್ ಸ್ಥಾನದಿಂದ ಅನರ್ಹ ಮಾಡಿರುವುದು ಸಂವಿಧಾನ-ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ ಎಂದು ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಏಳು ಲಕ್ಷ ಮತಗಳ ಅಂತರದಿಂದ ಜಯ ಗಳಿಸಿರುವ ರಾಹುಲ್ ಗಾಂಧಿ ಅವರನ್ನು ಸಂಸತ್ ಸ್ಥಾನದಿಂದ ಅನರ್ಹ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿರುವ ಅವಮಾನ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.