ರಾಯಚೂರು: ಆಶಾ ಕಾರ್ಯಕರ್ತೆಯರಿಗೆ, ಕೇಂದ್ರ ಸರ್ಕಾರದ ಪ್ರೋತ್ಸಾಹಧನ, ರಾಜ್ಯ ಸರ್ಕಾರದ ನಿಶ್ಚಿತ ಮಾಸಿಕ ಗೌರವಧನ ಹಾಗೂ ಚುನಾವಣೆ ಪೂರ್ವ ನೀಡಿದ್ದ ಪ್ರಣಾಳಿಕೆಯ ಭರವಸೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕ ರ್ತೆಯರ ಸಂಘದಿಂದ ಎಐಯುಟಿಯುಸಿ ನೇತೃತ್ವದಲ್ಲಿ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚುಗಳಿಗೆ ಅನುಗುಣವಾಗಿ ಕನಿಷ್ಠ 2000ರೂ. ಗೌರವಧನವನ್ನು ಹೆಚ್ಚಿಗೆ ಮಾಡಬೇಕು. ಮಾಸಿಕ 15,000 ನಿಶ್ಚಿತ ಗೌರವಧನ ನೀಡಬೇಕು, ಮೊಬೈಲ್ ಕೆಲಸಗಳನ್ನು ಒತ್ತಾಯ ಪೂರ್ವಕವಾಗಿ ಮಾಡಿಸಿಕೊಳ್ಳುತ್ತಿರುವುದನ್ನು ಕೈಬಿಡಬೇಕು, ಯಾರಿಗೆ ಮೊಬೈಲ್ ಕೆಲಸ ಮಾಡಲು ಆಗುವುದಿಲ್ಲ ಅಂತವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು. ತೀವ್ರವಾದ ಅನಾರೋಗ್ಯ, ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಕನಿಷ್ಠ 3 ತಿಂಗಳುಗಳ ಕಾಲ ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ಮತ್ತು ಚಟುವಟಿಕೆಗಳ ನಿಗದಿತ ಪ್ರೋತ್ಸಾಹಧನ ನೀಡಬೇಕು. ಆಶಾ ಸೇವೆಯಲ್ಲಿದ್ದಾಗ ಆಗುವ ಅನಾಹುತಗಳಿಗೆ ಸಂಪೂರ್ಣ ಜವಾಬ್ದಾರಿಯನ್ನು ಇಲಾಖೆ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಲಾಯಿತು.
ಪ್ರತಿ ವರ್ಷ ಆಶಾ ಕಾರ್ಯಕರ್ತೆಯರಿಗೆ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಿಸಬೇಕು. ತೀವ್ರ ಕಾಯಿಲೆಗಳಿದ್ದಲ್ಲಿ ಕೂಡಲೇ ಉಚಿತ ಚಿಕಿತ್ಸೆ ಒದಗಿಸಬೇಕು, ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ, ಕನಿಷ್ಠ ವೇತನ, ಗ್ರಾಚ್ಯುಟಿ, ಪಿಎಫ್, ಇಎಸ್‌ಐ ಸೌಲಭ್ಯ ನೀಡಬೇಕೆಂದು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷೆ ಈರಮ್ಮ, ಕಾರ್ಯದರ್ಶಿ ರಾಧಾ, ಪ್ರಮುಖರಾದ ಮಹೇಶ ಚೀಕಲಪರ್ವಿ, ಶರಣಪ್ಪ ಉದ್ಬಾಳ, ಅಣ್ಣಪ್ಪ, ಎನ್.ಎಸ್.ವೀರೇಶ, ಸೇರಿದಂತೆ ಇತರರಿದ್ದರು.