ಎಂಟು ದಿನಗಳಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ: ಬಿಎಸ್‌ವೈ

ರಾಯಚೂರು: ರಾಜ್ಯದಲ್ಲಿನ ಎಲ್ಲ ಲೋಕಸಭೆ ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಅಭಿಪ್ರಾಯವನ್ನು ಸಂಗ್ರಹಿಸಲಾಗುತ್ತಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಜೊತೆಗೆ ಚರ್ಚಿಸಿ ಮುಂದಿನ ಎಂಟು ದಿನಗಳಲ್ಲಿ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ದ ಮೋದಿ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮ ನಂತರ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿ, ಪಕ್ಷದ ಕಾರ್ಯಕರ್ತರ, ಮುಖಂಡರ ಅಭಿಪ್ರಾಯ ಪಡೆದು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದರು.

ಪಾಕಿಸ್ತಾನದಲ್ಲಿನ ಉಗ್ರರ ತಾಣಗಳ ಮೇಲೆ ನಮ್ಮ ಸೇನೆ ವೈಮಾನಿಕ ದಾಳಿ ನಡೆಸಿರುವುದನ್ನು ರಾಜಕೀಯ ಲಾಭಕ್ಕಾಗಿ ಉಪಯೋಗಿಸಿಕೊಳ್ಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸರ್ವಪಕ್ಷಗಳ ಬೆಂಬಲದಿಂದ ಪ್ರಧಾನಿ ಮೋದಿ ಈ ಸಾಧನೆ ಮಾಡಲು ಸಾಧ್ಯವಾಗಿದೆ. ಯಾರೋ ಇದನ್ನು ತಿರುಚಿ ಅಪವಾದ ಮಾಡಿದ್ದಾರೆ.

ಪ್ರಧಾನಿ ಮೋದಿ ಮತ್ತು ರಾಜನಾಥಸಿಂಗ್ ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಿ ನಿರ್ಧಾರ ಕೈಗೊಂಡಿದ್ದು, ಜಗತ್ತು ಅಚ್ಚರಿ ಪಡುವಂತೆ ವಿಶ್ವದ ಎಲ್ಲ ರಾಷ್ಟ್ರಗಳು ನಮಗೆ ಬೆಂಬಲ ಸೂಚಿಸಿವೆ. ಪೈಲಟ್ ಅಭಿನಂದನ್‌ರನ್ನು ಪಾಕಿಸ್ತಾನ ಗೌರವದಿಂದ ವಾಪಸ್ ಕಳಿಸಬೇಕು ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಕೆ.ಶಿವನಗೌಡ ನಾಯಕ, ಡಾ.ಶಿವರಾಜ ಪಾಟೀಲ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ ಹಾಗೂ ಇತರರಿದ್ದರು.