

ರಾಯಚೂರು: ದೇವದುರ್ಗ ತಾಲೂಕಿನ ಜಾಲಹಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಹೋಗುವ ರಸ್ತೆ ತೀರಾ ಹದಗೆಟ್ಟಿದ್ದು, ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ)ಯ ಜಿಲ್ಲಾ ಪ್ರಾಧಾನ ಕಾರ್ಯದರ್ಶಿ ರಾಮಕೃಷ್ಣ ಭಜಂತ್ರಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, 300 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿರುವ ಜಾಲಹಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ರಸ್ತೆ ಮಳೆಗೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ ಬಗ್ಗೆ ದೇವದುರ್ಗ ತಹಸೀಲ್ದಾರ್ಗೆ ಮನವಿ ಸಲ್ಲಿಸಲಾಗಿದ್ದು, ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಒಂದು ವಾರದೊಳಗೆ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ಸಂಘಟನೆಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಮಳೆ ನೀರಿನಿಂದ ಹಾಳದ ರಸ್ತೆಯೆಲ್ಲ ರಾಡಿಯಾಗಿದ್ದು, ನೀರು ನಿಂತು ಅನೇಕ ರೋಗಗಳು ಹರಡುವ ಭೀತಿಯಲ್ಲಿ ವಿದ್ಯಾರ್ಥಿಗಳಿದ್ದಾರೆ. ಈ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಿ ಬರಲು ತುಂಬಾ ತೊಂದರೆಯಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ಗಂಗಣ್ಣ ಡಿಶ್, ನಂದಪ್ಪ ಮಡ್ಡಿ, ಎಸ್.ಎಸ್ ಪಾಷಾ, ಗುರುನಾಥ ರೆಡ್ಡಿ, ಭೀಮಣ್ಣ ನಾಯಕ, ರಾಮಣ್ಣ, ಭೀಮಣ್ಣ ಸೇರಿದಂತೆ ಇತರರಿದ್ದರು.