More

    ಶಾಲೆಗಳಲ್ಲಿ ಸುರಕ್ಷಿತ ವಾತಾವರಣ ನಿರ್ಮಿಸಿ; ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೂಚನೆ

    ತರಗತಿಗಳಿಗೆ ಚಾಲನೆ | ಅಗತ್ಯ ಸೌಲಭ್ಯ ಕಲ್ಪಿಸುವ ಭರವಸೆ

    ರಾಯಚೂರು: ಸರ್ಕಾರದ ಆದೇಶದ ಮೇರೆಗೆ ಪ್ರೌಢಶಾಲೆ, ಪಿಯು ತರಗತಿಗಳನ್ನು ಪ್ರಾರಂಭಿಸಲಾಗುತ್ತಿದೆ. ಶಿಕ್ಷಕರು ಶಾಲೆಗಳಲ್ಲಿ ಸುರಕ್ಷಿತ ವಾತಾವರಣ ನಿರ್ಮಾಣ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು.

    ಬಾಯಿದೊಡ್ಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಶಾಲೆ ಪ್ರಾರಂಭೋತ್ಸವಕ್ಕೆ ಮುನ್ನೆ ಶಾಲೆಗಳ ಸ್ವಚ್ಛತೆ ನಡೆಸಲಾಗಿದ್ದು, ಶಿಕ್ಷಕರು, ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಪಾಲಕರು ಭಯ, ಆತಂಕವಿಲ್ಲದೆ ಮಕ್ಕಳನ್ನು ಶಾಲೆಗೆ ಕಳುಹಿಸಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಶಾಲೆಗೆ ಆಗಮಿಸಿದ್ದಾರೆ. ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ಮೂಲಕ ಉತ್ತಮ ಪ್ರಜೆಗಳಾಗಬೇಕು. ಶಾಲೆಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

    ಜಿ.ಪಂ. ಸಿಇಒ ಶೇಖ್ ತನ್ವೀರ್ ಆಸೀಫ್ ಮಾತನಾಡಿ, ವಿವಿಧ ಯೋಜನೆಗಳ ಮೂಲಕ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಸುಸಜ್ಜಿತ ಕೊಠಡಿ, ಸ್ಮಾರ್ಟ್ ಕ್ಲಾಸ್, ಶೌಚಗೃಹ, ಕಾಂಪೌಂಡ್ ಗೋಡೆಗಳನ್ನು ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಶಾಲೆಗಳಲ್ಲಿ ಉತ್ತಮ ಪರಿಸರ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶಾಲೆಗಳನ್ನು ಸಿದ್ಧಪಡಿಸಲಾಗುತ್ತಿದೆ. ವಿದ್ಯಾರ್ಥಿಗಳು ಕೋವಿಡ್ ನಿಯಮ ಪಾಲಿಸಿ ಪ್ರತಿನಿತ್ಯ ತರಗತಿಗಳಲ್ಲಿ ಭಾಗವಹಿಸಿ ಉತ್ತಮ ಫಲಿತಾಂಶ ಪಡೆದುಕೊಳ್ಳಲು ಮುಂದಾಗಬೇಕು ಎಂದು ಹೇಳಿದರು.

    ಸಂದರ್ಭ ಮಾಡಿದ ಕೆಲಸ ಕಾರ್ಯಗಳು ಹಾಗೂ ಆನ್‌ಲೈನ್ ತರಗತಿಗಳ ಕುರಿತು ಮಕ್ಕಳೊಂದಿಗೆ ಡಿಸಿ, ಸಿಇಒ ಸಂವಾದ ನಡೆಸಿದರು. ಇದಕ್ಕೂ ಮೊದಲು ಅತಿಥಿಗಳನ್ನು ವಿದ್ಯಾರ್ಥಿಗಳು ಕುಂಭಗಳನ್ನು ಹಿಡಿದು ಸ್ವಾಗತಿಸಿದರು. ಜಿಲ್ಲೆಯಲ್ಲಿ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಒಟ್ಟು 449 ಶಾಲೆಗಳಲ್ಲಿ 9 ಮತ್ತು 10ನೇ ತರಗತಿಗಳನ್ನು ಆರಂಭಿಸಲಾಗಿದೆ. 9ನೇ ತರಗತಿಯಲ್ಲಿ 35,028 ವಿದ್ಯಾರ್ಥಿಗಳು, 10ನೇ ತರಗತಿಯಲ್ಲಿ 33,372 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. 2,635 ಶಿಕ್ಷಕರು ಒಂದನೇ ಡೋಸ್ ಕೋವಿಡ್ ಲಸಿಕೆ, 1,438 ಶಿಕ್ಷಕರು 2ನೇ ಡೋಸ್ ಲಸಿಕೆ ಪಡೆದಿದ್ದಾರೆ. ಕ್ಷೇತ್ರ ಸಮನ್ವಯಾಧಿಕಾರಿ ಅಮರೇಗೌಡ, ಗ್ರಾ.ಪಂ. ಅಧ್ಯಕ್ಷೆ ರೇಣುಕಮ್ಮ, ಎಸ್‌ಡಿಎಂಸಿ ಅಧ್ಯಕ್ಷ ಗೋವಿಂದಪ್ಪ ಉಪಸ್ಥಿತರಿದ್ದರು.

    ಶಾಲೆಗಳಲ್ಲಿ ಸುರಕ್ಷಿತ ವಾತಾವರಣ ನಿರ್ಮಿಸಿ; ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೂಚನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts