ರಾಯಚೂರಲ್ಲಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಸಮಾವೇಶ 23ಕ್ಕೆ

ರಾಯಚೂರು: ನಗರದ ರಾಮಲಿಂಗೇಶ್ವರ ದೇವಸ್ಥಾನ ಮೈದಾನದಲ್ಲಿ ಫೆ.23ರಂದು ಸಂಜೆ 4ಕ್ಕೆ ಜಿಲ್ಲಾ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಏರ್ಪಡಿಸಲಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಎಂಎಲ್ಸಿ ಎನ್.ಎಸ್.ಬೋಸರಾಜು ತಿಳಿಸಿದರು.
ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಜಿಲ್ಲಾವಾರು ಕಾರ್ಯಕರ್ತರ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಸಮಾವೇಶ ಕುರಿತು ಈಗಾಗಲೇ ಪಕ್ಷದ ಜಿಲ್ಲೆಯ ಮುಖಂಡರು, ಪದಾಧಿಕಾರಿಗಳ ಸಭೆ ನಡೆಸಲಾಗಿದೆ. ತಾಲೂಕುವಾರು ಸಭೆ ನಡೆಸಿ ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಸಮಾವೇಶದಲ್ಲಿ ಸುಮಾರು 25 ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ.
ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ವೇಣುಗೋಪಾಲ, ಕಾರ್ಯಾಧ್ಯಕ್ಷ ದಿನೇಶ ಗುಂಡುರಾವ್, ಈಶ್ವರ ಖಂಡ್ರೆ, ಪಕ್ಷದ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಜಿ.ಪರಮೇಶ್ವರ, ಸಚಿವರಾದ ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್ ಇತರರು ಪಾಲ್ಗೊಳ್ಳಲಿದ್ದಾರೆ.
ರಾಯಚೂರು ಲೋಕಸಭೆ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಬೇಕು ಎನ್ನುವ ವಿಷಯಕ್ಕೆ ಸಂಬಂಧಿಸಿದಂತೆ ಎಲ್ಲಿಯೂ ಚರ್ಚೆ ನಡೆದಿಲ್ಲ. ಜಿಲ್ಲೆಯ ಜೆಡಿಎಸ್ ನಾಯಕರು ಕೇಳುತ್ತಿರುವುದಕ್ಕೆ ಅರ್ಥವಿಲ್ಲ. ಹಿರಿಯ ಮುಖಂಡರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಎನ್.ಎಸ್.ಬೋಸರಾಜು ಹೇಳಿದರು.
ಸಂಸದ ಬಿ.ವಿ.ನಾಯಕ ಮಾತನಾಡಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಾಲಿ ಸಂಸದರಿಗೆ ಟಿಕೆಟ್ ನೀಡುವುದಾಗಿ ಪಕ್ಷದ ನಾಯಕರು ಭರವಸೆ ನೀಡಿದ್ದಾರೆ. ರಾಯಚೂರು ಲೋಕಸಭೆ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದಿಲ್ಲ ಎನ್ನುವ ಭರವಸೆಯಿದೆ. ವಿರೋಧಿಗಳು ನಾನು ಬಿಜೆಪಿಗೆ ಹೋಗಲಿದ್ದೇನೆ ಎಂದು ಊಹಾಪೋಹ ಹರಡುತ್ತಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭ ಪಕ್ಷದ ಜಿಲ್ಲಾ ಅಧ್ಯಕ್ಷ ರಾಮಣ್ಣ ಇರಬಗೇರಾ, ಮುಖಂಡರಾದ ಪಾರಸಮಲ್ ಸುಖಾಣಿ, ಜಿ.ಶಿವಮೂರ್ತಿ, ಜಯಣ್ಣ, ಕೆ.ಶಾಂತಪ್ಪ, ತಾಯಣ್ಣ ನಾಯಕ, ರುದ್ರಪ್ಪ ಅಂಗಡಿ, ಜಿ.ಬಸವರಾಜ ರೆಡ್ಡಿ, ನಗರಸಭೆ ಸದಸ್ಯ ರಮೇಶ ಉಪಸ್ಥಿತರಿದ್ದರು.