More

    ಕುಡಿವ ನೀರಿನ ಯೋಜನೆಗಳನ್ನು ಪೂರ್ಣಗೊಳಿಸಲು ಗಡುವು ನಿಗದಿಪಡಿಸಿಕೊಳ್ಳುವಂತೆ ಸಚಿವ ಕೆ.ಎಸ್.ಈಶ್ವರಪ್ಪ ಸೂಚನೆ

    ರಾಯಚೂರು: ಜಲ ಜೀವನ, ಜಲಧಾರೆ ಸೇರಿದಂತೆ ವಿವಿಧ ಕುಡಿವ ನೀರಿನ ಯೋಜನೆಗಳನ್ನು ಪೂರ್ಣಗೊಳಿಸಲು ಗಡುವು ನಿಗದಿಪಡಿಸಿಕೊಂಡು ಆ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

    ಸ್ಥಳೀಯ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಬರುವ ಬೇಸಿಗೆಯಲ್ಲಿ ಕುಡಿವ ನೀರಿನ ಸಮಸ್ಯೆಯಾಗದಂತೆ ಸಮಸ್ಯಾತ್ಮಕ ಹಳ್ಳಿಗಳನ್ನು ಗುರುತಿಸಿ ನೀರು ಒದಗಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದರು.

    ಗ್ರಾಮೀಣ ಕುಡಿವ ನೀರು ಸರಬರಾಜು ಇಲಾಖೆ ಇಇ ಗಣಪತಿ ಸಾಕ್ರೆ ಮಾತನಾಡಿ, ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ 83,480 ಮನೆಗಳಿಗೆ ನಳ ಸಂಪರ್ಕ ನೀಡಿ ಶುದ್ಧ ಕುಡಿವ ನೀರು ಒದಗಿಸುವ ನಿಟ್ಟಿನಲ್ಲಿ 313 ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಭೆಗೆ ವಿವರಿಸಿದರು.

    ಸಚಿವ ಕೆ.ಎಸ್.ಈಶ್ವರಪ್ಪ ಉಳಿದ ಕಾಮಗಾರಿಗಳಿಗೆ ಮಾ.26ರೊಳಗೆ ಕೂಡಲೇ ಟೆಂಡರ್ ಕರೆದು ಕಾಮಗಾರಿ ಆದೇಶ ನೀಡಲು ಅಗತ್ಯ ಕ್ರಮಕೈಗೊಳ್ಳಬೇಕು. ಕೇವಲ ನಳ ಸಂಪರ್ಕ ನೀಡಿದರೆ ಸಾಲದು ನೀರು ಹರಿಸಲು ಕ್ರಮಕೈಗೊಳ್ಳಬೇಕು. ಕುಡಿವ ನೀರಿಗೆ ಸಂಬಂಧಿಸಿದಂತೆ ಪ್ರಸ್ತಾವನೆ ಕೊಟ್ಟರೆ ಅನುಮೋದನೆ ಕೊಡಲಾಗುವುದು ಎಂದರು.
    ಶಾಸಕರಾದ ವೆಂಕಟರಾವ್ ನಾಡಗೌಡ, ಬಸನಗೌಡ ದದ್ದಲ್ ಮಾತನಾಡಿ, ಜಲ ಜೀವನ್ ಮಿಷನ್ ಯೋಜನೆಯಡಿ ನೀರು ಸಂಗ್ರಹಕ್ಕೆ ಕೆರೆಗಳನ್ನು ನಿರ್ಮಾಣ ಮಾಡಬೇಕು. ಈ ಹಿಂದೆ ನೀರಿನ ಮೂಲವಿಲ್ಲದೆ ಯೋಜನೆ ರೂಪಿಸಿದ್ದರಿಂದ ಬಹುಗ್ರಾಮ ಕುಡಿವ ನೀರಿನ ಯೋಜನೆಗಳು ಕಾರ್ಯಗತವಾಗಿಲ್ಲ ಎಂದು ಹೇಳಿದರು.
    ಇದಕ್ಕೆ ಉತ್ತರಿಸಿದ ಕೆ.ಎಸ್.ಈಶ್ವರಪ್ಪ, ಯೋಜನೆಯಡಿ ಯಾವುದೇ ಟ್ಯಾಂಕ್ ನಿರ್ಮಾಣ ಮಾಡುವುದಿಲ್ಲ. ಅಗತ್ಯ ನೀರಿನ ಮೂಲಗಳನ್ನು ಗುರುತಿಸಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಜಲಧಾರೆ ಯೋಜನೆಯಡಿ 1,720 ಕೋಟಿ ರೂ.ವೆಚ್ಚದಲ್ಲಿ ನಾರಾಯಣಪುರ ಜಲಾಶಯದಿಂದ ನೀರು ಸರಬರಾಜು ಮಾಡುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

    ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕರಾದ ಡಾ.ಶಿವರಾಜ ಪಾಟೀಲ್, ವೆಂಕಟರಾವ್ ನಾಡಗೌಡ, ಬಸನಗೌಡ ದದ್ದಲ್, ರಾಜಾ ವೆಂಕಟಪ್ಪ ನಾಯಕ, ವಿಧಾನ ಪರಿಷತ್ ಸದಸ್ಯ ಬಸವರಾಜ ಪಾಟೀಲ್ ಇಟಗಿ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ, ಗ್ರಾಮೀಣಾಭಿವೃದ್ಧಿ ಇಲಾಖೆ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಸಿಇಒ ಶೇಖ್ ತನ್ವೀರ್ ಆಸೀಫ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts