More

    ಹೆಚ್ಚಿದ ಕೃಷ್ಣಾ ನದಿ ಅಬ್ಬರ, ಗ್ರಾಮಗಳಲ್ಲಿ ಅಧಿಕಾರಿಗಳ ಬೀಡು, ಸೇತುವೆಗಳು ಮುಳುಗಡೆ

    ರಾಯಚೂರು: ಕೃಷ್ಣಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗುತ್ತಿದ್ದು, ನದಿ ಪಾತ್ರದ ಹಳ್ಳಿಗಳಲ್ಲಿ ಪ್ರಹಾರ ಭೀತಿ ಮುಂದುವರಿದಿದೆ. ಪ್ರವಾಹ ಪರಿಸ್ಥಿತಿ ಎದುರಿಸಲು ವಿಪತ್ತು ನಿರ್ವಹಣಾ ಸಮಿತಿ ಮತ್ತು ನಿಯೋಜಿಸಲಾಗಿರುವ ನೋಡಲ್ ಅಧಿಕಾರಿಗಳು ನದಿ ಪಾತ್ರದ ಗ್ರಾಮಗಳಲ್ಲಿ ಬೀಡು ಬಿಟ್ಟಿದ್ದಾರೆ.

    ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 4.17 ಲಕ್ಷ ಕ್ಯೂಸೆಕ್ ನೀರು ಹರಿಸಲಾಗುತ್ತಿದ್ದು, ಜಲಾಶಯದ ಒಳ ಹರಿವು ಹೆಚ್ಚಾಗುತ್ತಿರುವುದರಿಂದ ಹೊರ ಹರಿವು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಜನರಿಗೆ ನದಿ ಪಾತ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗುತ್ತಿದೆ.

    ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದ್ದು, ಯರಗೋಡಿ ಸೇತುವೆ ಮುಳುಗಡೆಗೆ ಒಂದು ಅಡಿ ಮಾತ್ರ ಬಾಕಿಯಿದೆ. ದೇವದುರ್ಗ ತಾಲೂಕಿನ ಹೂವಿನಹೆಡಗಿ ಸೇತುವೆ ಮುಳುಗಡೆಯಾಗಿದ್ದು, ಗೂಗಲ್‌ನ ಪ್ರಭುಲಿಂಗೇಶ್ವರ ದೇವಸ್ಥಾನ ನೀರಿನಿಂದ ಸುತ್ತುವರಿದಿದೆ. ರಾಯಚೂರಿನ ತಾಲೂಕಿನ ಗುರ್ಜಾಪುರ ಬ್ಯಾರೇಜ್ ಮೇಲೆ ನೀರು ಹರಿಯುತ್ತಿದೆ.

    ನದಿ ಪಾತ್ರದ ಗ್ರಾಮಗಳಲ್ಲಿ ಜಮೀನಿಗೆ ನೀರು ನುಗ್ಗಿ ಬೆಳೆಗಳು ಹಾನಿಗೊಳಗಾಗಿದ್ದು, ನದಿಯಲ್ಲಿ ನೀರಿನ ಪ್ರಮಾಣ ಮತ್ತಷ್ಟು ಹೆಚ್ಚಳವಾದಲ್ಲಿ ಹಲವು ಗ್ರಾಮಗಳ ಜನರನ್ನು ಸ್ಥಳಾಂತರಿಸಬೇಕಾಗಿರುವುದರಿಂದ ಅಧಿಕಾರಿಗಳು ಪರಿಹಾರ ಕೇಂದ್ರಗಳ ಆರಂಭಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.

    ತುಂಗಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಇಳಿಮುಖವಾಗಿದ್ದು, ಕೃಷ್ಣಾ ನದಿ ಪಾತ್ರದಲ್ಲಿ ಮಾತ್ರ ಪ್ರವಾಹ ಭೀತಿ ಮುಂದುವರಿದಿದೆ. ನಡುಗಡ್ಡೆ ನಿವಾಸಿಗಳು ಹಾಗೂ ನದಿ ಪ್ರವಾಹ ಪೀಡಿತ ಗ್ರಾಮಗಳ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.

    ಗರ್ಭಿಣಿಯರ ಸ್ಥಳಾಂತರ: ಕೃಷ್ಣಾ ನದಿಗೆ ಹೆಚ್ಚಿನ ನೀರು ಹರಿದು ಬಿಡುತ್ತಿರುವುದರಿಂದ ನದಿ ತೀರದ ಗ್ರಾಮಗಳಲ್ಲಿನ ಗರ್ಭಿಣಿಯರನ್ನು ಸುರಕ್ಷಿತ ಸ್ಥಳ ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ. ಲಿಂಗಸುಗೂರು ತಾಲೂಕಿನ ಯರಗೋಡೆ ಮತ್ತು ಜಲದುರ್ಗ ಸೇತುವೆ ಮುಳುಗಡೆಯಾಗುವ ಹಂತದಲ್ಲಿರುವುದರಿಂದ ಜಲದುರ್ಗ, ಹಂಚಿನಾಳ, ಯರಗೋಡಿ ಗ್ರಾಮಗಳಲ್ಲಿನ ಗರ್ಭಿಣಿಯರನ್ನು ಲಿಂಗಸುಗೂರಿನ ತಾಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗುತ್ತಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಆಂಬುಲೆನ್ಸ್ ಮೂಲಕ ಗ್ರಾಮಗಳಿಗೆ ತೆರಳಿ ಕುಟುಂಬಸ್ಥರ ಮನವೊಲಿಸಿ ಗರ್ಭಿಣಿಯರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕಾರ್ಯ ನಡೆಸುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts