ರಾಯಚೂರು: ಸಂಘಟಿತ, ಅಸಂಘಟಿತ ಕಾರ್ಮಿಕರು ಹಾಗೂ ಗ್ರಾಮ ಪಂಚಾಯತಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್(ಸಿಐಟಿಯು) ವತಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ರಾಜ್ಯದಲ್ಲಿ ವಿವಿಧ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧಿ ನೀತಿಗಳನ್ನು ರೂಪಿಸಲಾಗುತ್ತಿವೆ. ಈ ನೀತಿಗಳಿಂದ ಕಾರ್ಮಿಕರಿಗೆ ತೀವ್ರ ಸಂಕಷ್ಟ ಎದುರಾಗಿದೆ ಎಂದರು.
ಕಾರ್ಮಿಕರ ವಿರುದ್ಧ 29 ಕಾನೂನುಗಳು ಹಾಗೂ 4 ಸಂಹಿತೆಗಳನ್ನು ಜಾರಿಗೊಳಿಸಲಾಗಿದ್ದು, ಅವುಗಳನ್ನು ರದ್ದುಪಡಿಸಿ ಕಾರ್ಮಿಕರ ಪರವಾದ ಕಾನೂನುಗಳನ್ನು ರೂಪಿಸಬೇಕು. ಎಲ್ಲ ವಲಯಗಳ ಅಕುಶಲ ಕಾರ್ಮಿಕರಿಗೆ 31,566 ರೂ.ಗಳ ಕನಿಷ್ಠ ವೇತನ ಜಾರಿಗೊಳಿಸಬೇಕು. ಎಲ್ಲ ಜಿಲ್ಲೆಗಳಲ್ಲಿಯೂ ಕಾರ್ಮಿಕ ನ್ಯಾಯಾಲಯಗಳನ್ನು ಸ್ಥಾಪಿಸಬೇಕು ಸೇರಿದಂತೆ ಕಾರ್ಮಿಕ ಹಲವು ಬೇಡಿಕಗಳನ್ನು ಈಡೇರಿಸುವಂತೆ ಆಗ್ರಹಿಸಲಾಯಿತು.
ಗ್ರಾಮ ಪಂಚಾಯತಿಗಳಲ್ಲಿ ಕೆಲಸ ಮಾಡುವ ಕರವಸೂಲಿಗಾರ, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ಸ್, ಜವಾನ, ಸ್ವಚ್ಛಗಾರರನ್ನು ಸರ್ಕಾರಿ ನೌಕರರನ್ನಾಗಿ ಘೋಷಿಸಬೇಕು. ದಿನ ನಿತ್ಯದ ಬಳಸುವ ವಸ್ತುಗಳ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನವನ್ನು 31,000 ರೂ.ಗಳಿಗೆ ನಿಗಧಿಪಡಿಸಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ಮಾಡುವ ನೌಕರರಿಗೆ ನಿವೃತ್ತಿ ಅಥವಾ ಮರಣ ಹೊಂದಿದರೆ ಅವರಿಗೆ ಪ್ರತಿ ತಿಂಗಳು ಕನಿಷ್ಠ 6000 ರೂ. ಪಿಂಚಣಿ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷೆ ಎಚ್.ಪದ್ಮಾ, ಪ್ರಧಾನ ಕಾರ್ಯದರ್ಶಿ ಡಿ.ಎಸ್ ಶರಣಬಸವ, ಗ್ರಾ.ಪಂ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಪ್ರಮುಖರಾದ ಜಂಬಣ್ಣ, ಕೆ.ಜಿ.ವೀರೇಶ, ಗಿರಿಯಪ್ಪ, ನಾಸೀರ್, ಮರಿಸ್ವಾಮಿ, ಆಂಜಿನೇಯ್ಯ ನಾಯಕ, ಪಾಂಡುರಂಗ ನಾಯಕ, ಸವಾರಪ್ಪ, ಶಣ್ಮುಕಪ್ಪ, ಈರಪ್ಪ, ಶಿವರಾಜಸ್ವಾಮಿ, ಸೇರಿದಂತೆ ಇತರರಿದ್ದರು.