ರಾಯಚೂರು: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯ ಶಿಫಾರುಗಳನ್ನು ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರದ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಮಾದಿಗ ದಂಡೋರ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ರಾಜ್ಯ ಸರ್ಕಾರ ಸದಾಶಿವ ಆಯೋಗದ ವರದಿಯನ್ನು ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಿ ಶಿಫಾರಸುಗಳನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡದೆ ಸುಳ್ಳು ಭರವಸೆ ನೀಡುತ್ತಿದೆ ಎಂದು ದೂರಿದರು.
ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ನೀಡಿ ಹಲವು ವರ್ಷಗಳಾಗಿದ್ದು, ಅಧಿಕಾರಕ್ಕೆ ಬಂದ ವಿವಿಧ ಪಕ್ಷಗಳ ಸರ್ಕಾರಗಳು ಶಿಫಾರಸುಗಳ ಜಾರಿಗೆ ಪ್ರಾಮಾಣಿಕ ಪ್ರಯತ್ನ ನಡೆಸಿಲ್ಲ. ಕಾನೂನುಬದ್ಧವಾಗಿ ಜನಸಂಖ್ಯೆ ಆಧರಿಸಿ ಶೋಷಿತ ಸಮುದಾಯಗಳಿಗೆ ಮೀಸಲಾತಿ ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು ತಡೆಯಲು ಯತ್ನಿಸಿದಾಗ ಸಿಪಿಐ ಗುರುರಾಜಗೆ ಕೈಗೆ ಬ್ಯಾರಿಕೇಡ್ ತಗುಲಿ ಗಾಯವಾಯಿತು.