ರಾಯಚೂರು: ರಾಯಚೂರು ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿಸಿ ರಾಜ್ಯಪಾಲರು ಬುಧವಾರ ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಸೂಚನೆ ಹೊರಡಿಸಿದ್ದಾರೆ.
ನಗರಸಭೆಯನ್ನು ಮಹಾನಗರ ಪಾಲಿಕೆ ಪ್ರದೇಶವೆಂದು ಪ್ರಸ್ತಾಪಿಸಿ ಅ.16ರಂದು ವಿಶೇಷ ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಿ 30 ದಿನಗಳೊಳಗಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ನಿಗದಿತ ಅವಧಿಯಲ್ಲಿ ಯಾವುದೇ ಆಕ್ಷೇಪಣೆ ಸ್ವೀಕೃತವಾಗದ ಕಾರಣ ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976ರ ಸೆಕ್ಷನ್-3, 4 ಮತ್ತು 503ನೇ ಪ್ರಕರಣದ ಮೂಲಕ ಆಡಳಿತಾತ್ಮಕ ಹಿತದೃಷ್ಠಿಯಿಂದ ರಾಯಚೂರು ಜಿಲ್ಲೆಯ ರಾಯಚೂರು ನಗರಸಭೆ ಪ್ರದೇಶವನ್ನು ರಾಯಚೂರು ಮಹಾನಗರ ಪಾಲಿಕೆಯೆಂದು ಘೋಷಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ ರಾಜ್ಯ ಪತ್ರದಲ್ಲಿ ತಿಳಿಸಿದ್ದಾರೆ.