ರಾಯಚೂರು: ಬಲಾಢ್ಯ ಸಮುದಾಯವಾಗಿರುವ ಪಂಚಮಸಾಲಿ ಸಮುದಾಯವನ್ನು 2ಎ ಪ್ರವರ್ಗಕ್ಕೆ ಸೇರಿಸುವ ಮೂಲಕ ಹಿಂದುಳಿದ ವರ್ಗಗಳ ಮೀಸಲಾತಿಗೆ ಧಕ್ಕೆ ತರಲಾಗುತ್ತಿದೆ ಎಂದು ಆರೋಪಿಸಿ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಮಂಗಳವಾರ ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರಗೇಶಗೆ ಮನವಿ ಸಲ್ಲಿಸಲಾಯಿತು.
ಪ್ರಬಲ ಸಮುದಾಯಗಳಿಗೆ ಮೀಸಲಾತಿ ನೀಡಿದರೆ, ಹಿಂದುಳಿದ ಜಾತಿಗಳು ಅವರೊಂದಿಗೆ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ. ಜತೆಗೆ ಸಂವಿಧಾನದ ಆಶಯಕ್ಕೆ ಧಕ್ಕೆಯುಂಟಾಗುತ್ತದೆ. ಪ್ರಬಲ ಮತ್ತು ಬಲಾಢ್ಯ ಸಮುದಾಯಗಳನ್ನು 2ಎ ಪ್ರವರ್ಗಕ್ಕೆ ಸೇರಿಸಿ ಮೀಸಲಾತಿ ಸೌಲಭ್ಯ ನೀಡುವುದರಿಂದ ಹಿಂದುಳಿದ ಮತ್ತು ಅತಿ ಹಿಂದುಳಿದ ಜಾತಿಗಳಿಗೆ ಮೀಸಲಾತಿಯಲ್ಲಿ ಅನ್ಯಾಯವಾಗಲಿದೆ. ಸರ್ಕಾರ ಒತ್ತಡಕ್ಕೆ ಮಣಿದು ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಜಾತಿಗಳಿಗೆ ಶೇ.10 ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಿರುವುದು ಹಿಂದುಳಿದ ಜಾತಿಗಳಿಗೆ ಮಾರಕವಾಗಲಿದೆ. ರಾಜ್ಯ ಸರ್ಕಾರ ಇದನ್ನು ಕಾರ್ಯಗತಗೊಳಿಸಬಾರದು. ತಮಿಳುನಾಡು ಸರ್ಕಾರ ಈ ಕುರಿತು ಸುಪ್ರೀಂಕೋರ್ಟ್‌ಗೆ ಮರು ಪರಿಶೀಲನೆಗೆ ಅರ್ಜಿ ಸಲ್ಲಿಸಿದ್ದು, ಕರ್ನಾಟಕ ಸರ್ಕಾರವೂ ಮೇಲ್ಮನವಿ ಸಲ್ಲಿಸಬೇಕು.
ಕಾಂತರಾಜ್ ಆಯೋಗದ ವರದಿಯನ್ನು ಅಂಗೀಕರಿಸಿ ಶಿಫಾರಸುಗಳನ್ನು ಕಾರ್ಯಗತಗೊಳಿಸಬೇಕು. ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸಿದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಲಾಯಿತು.