ಸಮಾನಾಂತರ ಜಲಾಶಯದ ಡಿಪಿಆರ್ ಮಾಡುವಂತೆ ಸೂಚನೆ – ಸಚಿವ ವೆಂಕಟರಾವ್ ನಾಡಗೌಡ ಹೇಳಿಕೆ

ರಾಯಚೂರು: ತುಂಗಭದ್ರಾ ಹೂಳಿನ ಸಮಸ್ಯೆ ಕುರಿತು ಬೆಂಗಳೂರಿನಲ್ಲಿ ಸಭೆ ಕರೆಯಲಾಗಿತ್ತು. ಹೂಳು ತೆಗೆವ ಹಣದಲ್ಲಿ ಎರಡು ಜಲಾಶಯ ನಿರ್ಮಾಣ ಮಾಡಬಹುದು ಎನ್ನುವ ಅಭಿಪ್ರಾಯ ವ್ಯಕ್ತವಾಗಿರುವ ಕಾರಣ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ತಿಳಿಸಿದರು.

ಕೊಪ್ಪಳ ಜಿಲ್ಲೆಯ ನವಲಿ ಹತ್ತಿರ ಸಮತೋಲನ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಟಿಬಿ ಬೋರ್ಡ್‌ಗೆ ಪ್ರಾಥಮಿಕ ವರದಿ ಕಳುಹಿಸಲಾಗಿದ್ದು, ಡಿಪಿಆರ್ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸ್ಥಳೀಯ ಜಿಪಂ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದರು.

ನದಿಗಳ ಜೋಡಣೆ ಮಾಡಿದರೂ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ಸಂಗ್ರಹಿಸುವ ವ್ಯವಸ್ಥೆ ನಮ್ಮಲ್ಲಿಲ್ಲ. ತೆಲಂಗಾಣ ಮತ್ತು ಆಂಧ್ರದ ಸಿಎಂಗಳ ಜತೆಗೆ ರಾಜ್ಯದ ಮುಖ್ಯಮಂತ್ರಿ ಮಾತನಾಡಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗುವುದು. ಬಜೆಟ್‌ನಲ್ಲಿ ಅಗತ್ಯ ಅನುದಾನ ತೆಗೆದಿಡಲು ಪ್ರಯತ್ನಿಸಲಾಗುವುದು ಎಂದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೂ.26ರಂದು ಮಾನ್ವಿ ತಾಲೂಕು ಕರೇಗುಡ್ಡ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ನೂತನ ರಾಯಚೂರು ವಿವಿ, ಐಐಐಟಿ, ರಾಯಚೂರಿಗೆ ವರ್ತುಲ ರಸ್ತೆ, ಸಿಂಧನೂರಿನಲ್ಲಿ ಪಶು ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಅಗತ್ಯ ಕ್ರಮಕೈಗೊಳ್ಳಲು ಒತ್ತಾಯಿಸಲಾಗುವುದು ಎಂದು ಸಚಿವ ವೆಂಕಟರಾವ್ ನಾಡಗೌಡ ಹೇಳಿದರು. ಶಾಸಕ ರಾಜಾ ವೆಂಕಟಪ್ಪ ನಾಯಕ, ಜಿ.ಪಂ. ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ, ಜಿಲ್ಲಾಧಿಕಾರಿ ಬಿ.ಶರತ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *