More

    ಸದಾಶಿವ ಆಯೋಗ ವರದಿ ಜಾರಿಗಾಗಿ ಸಮಾವೇಶ

    ರಾಯಚೂರು: ನ್ಯಾ.ಎ.ಜೆ. ಸದಾಶಿವ ಆಯೋಗ ವರದಿ ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಡಿ.11ರಂದು ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಎಂ.ವಿರೂಪಾಕ್ಷಿ ತಿಳಿಸಿದರು.

    ಸ್ಥಳೀಯ ಪತ್ರಿಕಾಭವನದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು, ಒಳ ಮೀಸಲಾತಿಗಾಗಿ 25 ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಅಧಿಕಾರಕ್ಕೆ ಬಂದ ಸರ್ಕಾರಗಳು ವರದಿ ಜಾರಿಗೆ ಪ್ರಯತ್ನ ನಡೆಸುತ್ತಿಲ್ಲ ಎಂದು ದೂರಿದರು.

    ರಾಜ್ಯ ಸರ್ಕಾರ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ. ಸುಗ್ರೀವಾಜ್ಞೆ 6 ತಿಂಗಳು ಮಾತ್ರ ಇರುತ್ತಿದ್ದು, ಸಂವಿಧಾನ ತಿದ್ದುಪಡಿ ಮಾಡುವ ಮೂಲಕ ಮೀಸಲಾತಿ ಹೆಚ್ಚಳ ಮಾಡಬೇಕಾಗಿದೆ. ಜನಸಂಖ್ಯೆ ಆಧರಿಸಿ ಒಳ ಮೀಸಲಾತಿಗಾಗಿ ನ್ಯಾ.ಎ.ಜೆ. ಸದಾಶಿವ ಆಯೋಗ ನೀಡಿರುವ ವರದಿ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಣಯ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

    ಸಮಾವೇಶದಲ್ಲಿ 4 ರಿಂದ 5 ಲಕ್ಷ ಜನ ಸೇರುವ ನಿರೀಕ್ಷೆಯೊಂದಿಗೆ ಜಿಲ್ಲೆಯಿಂದ 12 ಸಾವಿರ ಮಂದಿ ತೆರಳಲಿದ್ದಾರೆ. ಅದಕ್ಕಾಗಿ 100 ಬಸ್‌ಗಳ ವ್ಯವಸ್ಥೆ ಮಾಡಿದ್ದು, ಕೆಲವರು ಖಾಸಗಿ ವಾಹನ, ರೈಲು ಮೂಲಕ ಡಿ.12ರ ರಾತ್ರಿ ತೆರಳಲಿದ್ದಾರೆ ಎಂದು ಎಂ.ವಿರೂಪಾಕ್ಷಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿ ಪದಾಧಿಕಾರಿಗಳಾದ ರವೀಂದ್ರ ಜಲ್ದಾರ್, ನರಸಿಂಹಲು ಮಾಡಗಿರಿ, ಪಿ.ಯಲ್ಲಪ್ಪ, ಹೇಮರಾಜ ಅಸ್ಕಿಹಾಳ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts