ರಾಯಚೂರು: ಪರಿಶಿಷ್ಟ ಹಾಗೂ ಅಲೆಮಾರಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರದಿಂದ ಜಾರಿಗೊಳಿಸಲಾದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಜವಾಬ್ದಾರಿಯುತವಾಗಿ ನಿರ್ವಹಿಸಬೇಕೆಂದು ಪ.ಜಾ, ಪ.ಪಂ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಸೂಚನೆ ನೀಡಿದರು.
ನಗರದ ಡಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಶುಕ್ರವಾರ ಮಾತನಾಡಿ, ಅಲೆಮಾರಿ ಮತ್ತು ಅರೆ ಅಲೆಮಾರಿಯ 46 ಜನಾಂಗದ ಆರ್ಥಿಕ ಅಭಿವೃದ್ಧಿಗಾಗಿ ಹಾಗೂ ಜನಾಂಗ ಒಂದು ಕಡೆ ಸ್ಥಿರವಾಗಿ ನೆಲೆಸಲು ನಿಗಮದಿಂದ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಸಮುದಾಯದ ಜನರು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕು ಎಂದರು.
ಅಲೆಮಾರಿಗಳು ಮನೆ, ಸ್ವಯಂ ಉದ್ಯೋಗ ಸೇರಿದಂತೆ ಇನ್ನಿತರ ಜೀವನ ಭದ್ರತೆ ಚಟುವಟಿಕೆಗಳನ್ನು ಪಡೆಯಲು ಸರ್ಕಾರದ ಸವಲತ್ತುಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಿ.ಸಿ ಕೆ.ನಿತೀಶ, ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಆನಂದ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚಿದಾನಂದ, ಯೋಜನಾ ಅನುಷ್ಠಾನ ಸಮಿತಿಯ ಸದಸ್ಯ ಪರಶುರಾಮ ನಕ್ಕುಂಡಿ ಸೇರಿದಂತೆ ಇತರರಿದ್ದರು.