ರಾಯಚೂರು: ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಜಿಲ್ಲಾ ಘಟಕದಿಂದ ನ.10ರಂದು ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಮಾವೇಶ ಮತ್ತು ಸಾಮಾನ್ಯ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ನರಸಪ್ಪ ಭಂಡಾರಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ನಗರದ ಎಸ್‌ಎಸ್‌ಆರ್‌ಜಿ ಮಹಿಳಾ ಮಹಾವಿದ್ಯಾಲಯದಲ್ಲಿ ಬೆಳಿಗ್ಗೆ 11 ಗಂಟೆಗೆ ಉಪನ್ಯಾಸಕರ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಸದ ಜಿ.ಕುಮಾರ ನಾಯಕ, ಶಾಸಕರಾದ ಡಾ.ಶಿವರಾಜ್ ಪಾಟೀಲ್, ಬಸನಗೌಡ ದದ್ದಲ್, ಎಂಎಲ್ಸಿ ಎ.ವಸಂತಕುಮಾರ, ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಎ.ಎಚ್ ನಿಂಗೇಗೌಡ ಸೇರಿದಂತೆ ಇತರರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ಪಾಟೀಲ್, ಖಜಾಂಚಿ ಮಂಜುನಾಥ, ಪ್ರಮುಖರಾದ ಗೋವರ್ಧನ, ಚಂದ್ರಶೇಖರ, ವೆಂಕಟೇಶ ಸೇರಿದಂತೆ ಇತರರಿದ್ದರು.