ಮತ ಗಳಿಕೆ ಉದ್ದೇಶಕ್ಕೆ ಪ್ರಧಾನಿ ಮೋದಿಯಿಂದ ಕಿಸಾನ್ ಸಮ್ಮಾನ್ ಜಾರಿ – ಕೃಷಿ ಸಚಿವ ಶಿವಶಂಕರ ರೆಡ್ಡಿ

ರಾಯಚೂರು: ಲೋಕಸಭೆ ಚುನಾವಣೆಯಲ್ಲಿ ಮತ ಗಳಿಕೆ ಉದ್ದೇಶದಿಂದಲೇ ಕಿಸಾನ್ ಸಮ್ಮಾನ್ ಯೋಜನೆಯಡಿ ಹಣ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ರೈತರ ಸಾಲಮನ್ನಾ ಮಾಡುವುದು ಲಾಲಿಪಪ್ ನೀಡಿದಂತೆ ಎಂದು ಹೇಳಿದ್ದ ಪ್ರಧಾನಿ ಮೋದಿ ಸಹ ಈಗ ಅದನ್ನೇ ಮಾಡುತ್ತಿದ್ದಾರೆ ಎಂದು ಕೃಷಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ಲೇವಡಿ ಮಾಡಿದರು.

ಸ್ಥಳೀಯ ಕೃಷಿ ವಿಜ್ಞಾನ ವಿವಿಯಲ್ಲಿ ಹಮ್ಮಿಕೊಂಡಿದ್ದ ಘಟಿಕೋತ್ಸವದಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿ, ಐದು ವರ್ಷಗಳಲ್ಲಿ ರೈತರ ಸಾಲಮನ್ನಾಗೆ ಸಂಬಂಧಿಸಿದಂತೆ ನಾನಾ ರೀತಿಯಲ್ಲಿ ಹೇಳಿಕೆ ನೀಡುತ್ತಾ ಕಾಲಹರಣ ಮಾಡಿದ್ದ ಕೇಂದ್ರ ಸರ್ಕಾರ ಈಗ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೆ ಮುಂದಾಗಿದೆ ಎಂದರು.

ಬರ ಪರಿಹಾರ ಕಾರ್ಯಕ್ಕೆ ಕೇಂದ್ರ ಸರ್ಕಾರ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ 2,064 ಕೋಟಿ ರೂ. ಬೆಳೆ ನಷ್ಟವಾಗಿದ್ದರೂ ಕೇಂದ್ರ ಸರ್ಕಾರ ಕೇವಲ 994 ಕೋಟಿ ರೂ. ಪರಿಹಾರ ಮಂಜೂರು ಮಾಡಿದ್ದು, ಇದುವರೆಗೆ ಬಿಡುಗಡೆ ಮಾಡಿಲ್ಲ.

ಹಿಂಗಾರು ಹಂಗಾಮಿನಲ್ಲಿ 2,344 ಕೋಟಿ ರೂ. ಬೆಳೆ ನಷ್ಟವಾಗಿದ್ದು, ರಾಜ್ಯ ಸರ್ಕಾರ ಕಳಿಸಿದ ಪ್ರಸ್ತಾವನೆಗೆ ಕೇಂದ್ರ ಸರ್ಕಾರದಿಂದ ಸ್ಪಂದನೆ ಸಿಕ್ಕಿಲ್ಲ. ಈಗ ಬರ ಅಧ್ಯಯನ ತಂಡ ಆಗಮಿಸಿದ್ದು, ಕೇಂದ್ರ ಸರ್ಕಾರ ಮಹಾರಾಷ್ಟ್ರಕ್ಕೆ ನೀಡಿದಷ್ಟು ಪರಿಹಾರ ರಾಜ್ಯಕ್ಕೆ ನೀಡದೆ ತಾರತಮ್ಯ ಧೋರಣೆ ಅನುಸರಿಸುತ್ತಿದೆ.

ರಾಯಚೂರು ಕೃಷಿ ವಿವಿಯ ನೇಮಕದಲ್ಲಿ ನಡೆದ ಅಕ್ರಮಗಳ ಕುರಿತು ಸರ್ಕಾರ ತನಿಖೆಗಾಗಿ ನೇಮಕ ಮಾಡಿದ್ದ ಡಾ.ಶೀಲವಂತರ್ ಅವರ ನೇತೃತ್ವದ ಸಮಿತಿ ಸರ್ಕಾರಕ್ಕೆ ಇನ್ನೂ ವರದಿ ಸಲ್ಲಿಸಿಲ್ಲ. ವರದಿ ಪಡೆದ ನಂತರ ಅಕ್ರಮಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು.

ದೇಶದ ಹಿತಕ್ಕಾಗಿ ಕೈಗೊಳ್ಳುವ ಕ್ರಮಗಳ ವಿಚಾರಗಳಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಉಗ್ರರ ಅಡಗುದಾಣಗಳ ಮೇಲೆ ವೈಮಾನಿಕ ದಾಳಿ ಮಾಡಿರುವುದು ಒಳ್ಳೆಯ ಕೆಲಸವಾಗಿದೆ. ಯೋಧರ ಮೇಲೆ ದಾಳಿ ಮಾಡಿದವರಿಗೆ ಪ್ರತ್ಯುತ್ತರ ನೀಡಬೇಕಿತ್ತು. ಕೇಂದ್ರ ಸರ್ಕಾರ ಆ ಕೆಲಸವನ್ನು ಮಾಡಿದೆ ಎಂದು ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು.