

ನವದೆಹಲಿ: ದೇಶಾದ್ಯಂತ ಮಳೆ ಅಬ್ಬರಿಸುತ್ತಿದ್ದು, ದೆಹಲಿ ಸೇರಿದಂತೆ 17 ರಾಜ್ಯಗಳಿಗೆ ಐಎಂಡಿ ಎಚ್ಚರಿಕೆ ನೀಡಿದೆ. ಆ.14 ಮಂಗಳವಾರ ದೆಹಲಿ ಸುತ್ತಮುತ್ತಲಿನ ನಗರಗಳಲ್ಲಿ ಭಾರಿ ಮಳೆಯಾಗಿದ್ದು, ಇನ್ನೂ 2ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಆಗಸ್ಟ್ 14 ಮತ್ತು ಆಗಸ್ಟ್ 15ರಂದು ದೆಹಲಿ, ಚಂಡೀಗಢ, ಹರಿಯಾಣ, ಪಂಜಾಬ್, ರಾಜಸ್ಥಾನ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ, ಬಿಹಾರ, ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕರ್ನಾಟಕ, ಜಮ್ಮು ಕಾಶ್ಮೀರ, ಉತ್ತರಾಖಂಡ ಮತ್ತು ಗುಜರಾತ್‌ನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆಗಸ್ಟ್ 15 ರಂದು ಕರ್ನಾಟಕ, ಕೇರಳ, ಅರುಣಾಚಲ ಪ್ರದೇಶ, ಸಿಕ್ಕಿಂ, ಜಾರ್ಖಂಡ್, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಒಡಿಶಾ, ಬಿಹಾರ, ಪಶ್ಚಿಮ ಬಂಗಾಳ, ಉತ್ತರಾಖಂಡ, ಉತ್ತರ ಪ್ರದೇಶ, ಜಮ್ಮು, ಹರಿಯಾಣ, ಛತ್ತೀಸ್‌ಗಢ ಮತ್ತು ದೆಹಲಿಗೆ ಭಾರಿ ಮಳೆಯ ಎಚ್ಚರಿಕೆ ನೀಡಿದೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಲವು ರಾಜ್ಯಗಳಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆಯಿಂದಾಗಿ ಜನರು ಟ್ರಾಫಿಕ್ ಜಾಮ್ ಎದುರಿಸಿದರು. ಈ ಸಂದರ್ಭದಲ್ಲಿ ಇಬ್ಬರು ಮಕ್ಕಳು ಹಾಗೂ ಮಹಿಳೆಯೊಬ್ಬರು ಮಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಇನ್ನು ಕೇರಳ, ರಾಜಸ್ಥಾನ, ತಮಿಳುನಾಡು ಮತ್ತು ಉತ್ತರಾಖಂಡದಲ್ಲಿ ಹಗಲಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ಪಶ್ಚಿಮ ಹಿಮಾಲಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ವಾಯುವ್ಯ ಭಾರತದ ಬಯಲು ಸೀಮೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಆಗಸ್ಟ್ 18ರವರೆಗೆ, ಹರಿಯಾಣದಲ್ಲಿ ಆಗಸ್ಟ್ 16ರವರೆಗೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ಮೂರು ದಿನ ಹಾಗೂ ಪಂಜಾಬ್‌ನಲ್ಲಿ ಆಗಸ್ಟ್ 14ರಂದು ಭಾರಿ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಮತ್ತೊಂದೆಡೆ, ಉತ್ತರ ಪ್ರದೇಶದಲ್ಲಿ ಗಂಗಾ ಮತ್ತು ಯಮುನಾ ನದಿಗಳ ಪ್ರವಾಹದಿಂದಾಗಿ 30 ಕ್ಕೂ ಹೆಚ್ಚು ಜಿಲ್ಲೆಗಳು ಪ್ರವಾಹದಲ್ಲಿ ಮುಳುಗಿವೆ. ಗಂಗೆಯ ಘಾಟಿಗಳೂ ಮುಳುಗಿದವು. ಈ ಹಿನ್ನೆಲೆಯಲ್ಲಿ ಈ ಭಾಗದ ಜನರು ಜಾಗೃತರಾಗುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ರಾಜಸ್ಥಾನದಲ್ಲಿ ಮಳೆಯಿಂದಾಗಿ 3 ದಿನಗಳಲ್ಲಿ 25 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಭೂಕುಸಿತದಿಂದಾಗಿ 200 ಕ್ಕೂ ಹೆಚ್ಚು ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಜುಲೈ 27 ರಿಂದ ಆಗಸ್ಟ್ 12 ರವರೆಗೆ ಹಿಮಾಚಲದಲ್ಲಿ 1ಸಾವಿರ ಕೋಟಿ ರೂ.ಗೂ ಹೆಚ್ಚು ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜತೆಗೆ 100ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿರುವುದಾಗಿ ವರದಿಯಾಗಿದೆ.