More

    ಗುಡುಗು-ಸಿಡಿಲಿನ ಅಪಾಯ, ಎಚ್ಚರ

    ವಿಜಯವಾಣಿ ಬೆಂಗಳೂರು ಗ್ರಾಮಾಂತರ
    ಗುಡುಗು-ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳಲಿದ್ದು, ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಸಾರ್ವಜನಿಕರು ಕೆಲವೊಂದು ಮಾರ್ಗಸೂಚಿಗಳನ್ನು ಪಾಲಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದ್ದಾರೆ.
    ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಸಲಹೆ ಹಾಗೂ ಸೂಚನೆಗಳ ಆದೇಶ ಹೊರಡಿಸಿದೆ ಇವುಗಳನ್ನು ಸಾರ್ವಜನಿಕರು ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ. ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಬರುವ ಸಂದೇಶಗಳನ್ನು ಗಮನಿಸಬೇಕು. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು ಒಳಿತು. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಾದ ಮನೆಗಳು, ಚೇರಿಗಳು, ಅಂಗಡಿಗಳು ಮತ್ತು ಕಿಟಕಿ ಮುಚ್ಚಿರುವಂತಹ ವಾಹನಗಳಲ್ಲಿ ಆಶ್ರಯ ಪಡೆಯಬೇಕು.ಕೆರೆ ಮತ್ತು ನದಿಗಳು ಹಾಗೂ ಇನ್ನಿತರ ನೀರಿನ ಮೂಲಗಳಿಂದ ತಕ್ಷಣವೇ ದೂರವಿರಬೇಕು.

    ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಬೇಕು. ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆ ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳಬೇಕು ಸೇರಿ ವಿವಿಧ ಸೂಚನೆಗಳನ್ನು ನೀಡಿದ್ದು ಇವುಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.
    ಪ್ರಥಮ ಚಿಕಿತ್ಸಾ ವಿಧಾನ ಹೇಗೆ?
    ಸಿಡಿಲು, ಮಿಂಚು ಬಡಿದ ಸಮಯದಲ್ಲಿ ಪ್ರಾಥಮಿಕವಾಗಿ 102/ 108 ಸಹಾಯವಾಣಿಗೆ ಕರೆ ಮಾಡಬೇಕು. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ದೇಹದಲ್ಲಿ ಯಾವುದೇ ವಿದ್ಯುತ್ ಕಣಗಳು ಸಂಚಾರವಾಗುವುದಿಲ್ಲ. ಆದ್ದರಿಂದ, ವ್ಯಕ್ತಿಯನ್ನು ಮುಟ್ಟಿ ಉಪಚರಿಸುವ ವ್ಯಕ್ತಿಗೆ ಯಾವುದೇ ಅಪಾಯವಿರುವುದಿಲ್ಲ. ವ್ಯಕ್ತಿಯ ಉಸಿರಾಟ ಹಾಗೂ ಎದೆ ಬಡಿತವನ್ನು ಪರೀಕ್ಷಿಸಬೇಕು. ವ್ಯಕ್ತಿಯ ದವಡೆಗೆ ನೇರವಾಗಿ ಕುತ್ತಿಗೆಯಲ್ಲಿರುವ ರಕ್ತನಾಳವನ್ನು ಪರೀಕ್ಷಿಸುವುದರಿಂದ ಸುಲಭವಾಗಿ ನಾಡಿ ಮಿಡಿತ ತಿಳಿಯಬಹುದು. ಉಸಿರಾಟ ಕಂಡು ಬರದಿದ್ದಲ್ಲಿ ತಕ್ಷಣವೇ ಕೃತಕ ಉಸಿರಾಟ ಪ್ರಕ್ರಿಯೆ ಪ್ರಾರಂಭಿಸಬೇಕು. ಕಣ್ಣಿನ ದೃಷ್ಟಿ, ಕಿವಿಕೇಳಿಸುವಿಕೆ ಹಾಗೂ ಮೂಳೆಗಳ ಮುರಿದಿವೆಯೇ ಎಂದು ಪರೀಕ್ಷಿಸಬೇಕು, ಇದರಿಂದ ಪಾರ್ಶ್ವವಾಯು, ಲಕ್ವಾ ಹೊಡೆಯುವುದನ್ನು ಮತ್ತು ಅಧಿಕ ರಕ್ತಸ್ರಾವದಿಂದ ಉಂಟಾಗುವ ಅಪಾಯ ತಡೆಗಟ್ಟಬಹುದು. ವ್ಯಕ್ತಿಯು ಅಪಾಯಕಾರಿ ಸ್ಥಳದಲ್ಲಿದ್ದರೆ, ತಕ್ಷಣವೇ ಸೂಕ್ತ ರಕ್ಷಣಾ ಸ್ಥಳಕ್ಕೆ ಸ್ಥಳಾಂತರಿಸಬೇಕು.ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿ ಸುಟ್ಟಗಾಯಗಳಿಂದ ಬಳಲಬಹುದು ಹಾಗೂ ಕಾಣದ ಗಾಯಗಳು ಅಘಾತಕ್ಕೆ ಒಳಗಾಗಿರಬಹುದು. ಆದ್ದರಿಂದ, ವ್ಯಕ್ತಿಯಲ್ಲಿ ಇಂತಹ ಲಕ್ಷಣಗಳಿದ್ದಲ್ಲಿ, ಸೂಕ್ತ ಚಿಕಿತ್ಸೆಗಾಗಿ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕಳುಹಿಸಬೇಕು. ಸಿಡಿಲು ಬಡಿದಿರುವ ವ್ಯಕ್ತಿಯಿರುವ ಸ್ಥಳಕ್ಕೆ ತಲುಪಲು ಹಾಗೂ ಸಿಡಿಲು ಬಡಿತಕ್ಕೆ ಒಳಗಾದ ವ್ಯಕ್ತಿಯ ಆರೋಗ್ಯಸ್ಥಿತಿಯ ಬಗ್ಗೆ ನಿಖರ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.

      ಸಿನಿಮಾ

      ಲೈಫ್‌ಸ್ಟೈಲ್

      ಟೆಕ್ನಾಲಜಿ

      Latest Posts