ಮುಂದಿನ 4 ದಿನ ಕರಾವಳಿ, ಉ.ಕ.ದಲ್ಲಿ ಮಳೆ

rain
Published on

ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ವ್ಯಾಪ್ತಿಯ ಪ್ರದೇಶಗಳಲ್ಲಿ ತುಸು ಕುಂಠಿತವಾಗಿರುವ ಮಳೆ, ಕರಾವಳಿ, ಉತ್ತರ ಒಳನಾಡಿನಲ್ಲಿ ಮುಂದಿನ ನಾಲ್ಕೈದು ದಿನ ಬಿರುಸಾಗಿ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

ಚಿಕ್ಕಮಗಳೂರಿನ ಮೂಡಗೆರೆ, ದಾವಣಗೆರೆ, ಗದಗ, ಹಾವೇರಿಯ ಹನುಮಾನಮಟ್ಟಿ, ಶಿವಮೊಗ್ಗದ ಆಗುಂಬೆ, ಯಾದಗಿರಿ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಗುರುವಾರ ವರ್ಷಧಾರೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಆ.23ರಿಂದ ಆ.25ರವರೆಗೆ, ಬಾಗಲಕೋಟೆ, ಬೆಳಗಾವಿ, ಬೀದರ್​, ವಿಜಯಪುರದಲ್ಲಿ ಆ.23ರಂದು ಭಾರಿ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಇಲಾಖೆ ಯೆಲ್ಲೋ ಅರ್ಲಟ್​ ಕೊಟ್ಟಿದೆ. ಬೆಂಗಳೂರು, ಬೆಂ. ಗ್ರಾಮಾಂತರ, ಕೊಡಗು,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಸಾಧಾರಣ ಮಳೆ ಸುರಿಯಲಿದೆ.

9 ಜಿಲ್ಲೆಗಳಲ್ಲಿ ಮಳೆ ಕೊರತೆ:

ಜೂನ್​ನಿಂದ ಆ.22ರವರೆಗೆ ರಾಜ್ಯಾದ್ಯಂತ ವಾಡಿಕೆಗಿಂತ ಅಧಿಕ ಮಳೆ ಸುರಿದರೂ, ಪ್ರಸಕ್ತ ತಿಂಗಳಲ್ಲಿ 9 ಜಿಲ್ಲೆಗಳಲ್ಲಿ ಕೊರತೆಯಾಗಿದೆ. ಆ.1ರಿಂದ ಆ.24ರವರೆಗೆ ಕಲಬುರಗಿ, ಬೀದರ್​, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಅಂಕಿಅಂಶಗಳಿಂದ ತಿಳಿದುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net